ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ಎಸ್.ಆರ್.ಪಾಟೀಲ್

6 years ago

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗ್ತಿದ್ದು, ಕೋವಿಡ್​ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಆತಂಕದ ವಿಚಾರದ ಅಂದ್ರೆ ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸಾವಿನ ಪ್ರಮಾಣ ಕೂಡ ಹೆಚ್ಚಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಏರಿಕೆ ಮತ್ತು ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರಕ್ಕೆ ಸರದಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣ ಹಾಗೂ ಕೊರೊನಾ ಚಿಕಿತ್ಸೆಯಲ್ಲಿ ಎದುರಾಗಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಪಾಟೀಲ್, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಬೆಡ್​ಗಳನ್ನು ಮೀಸಲಿಡುವಂತೆ ಸೂಚಿಸಲಾಗಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ರಾಜ್ಯದ ಹಲವೆಡೆ ಆಸ್ಪತ್ರೆಗಳಲ್ಲಿ ಬೆಡ್​ ಸಿಗದೆ ಸೋಂಕಿತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರಕ್ಕೂ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ತಲೆದೋರಿದೆ. ಬೆಂಗಳೂರಿನ ಬಹುತೇಕ ಚಿತಾಗಾರಗಳು ಸ್ಥಗಿತವಾಗಿದ್ದು, ಸಾವನ್ನಪ್ಪಿದ ಸೋಂಕಿತರ ಶವಗಳನ್ನ ಆ್ಯಂಬುಲೆನ್ಸ್​ಗಳಲ್ಲಿ ಇಟ್ಟು ಕ್ಯೂನಲ್ಲಿ ನಿಂತಿರುವ ದೃಶ್ಯ ಭಯಾನಯಕವಾಗಿದೆ ಎಂದಿದ್ದಾರೆ.

ಈ ದೃಶ್ಯಗಳನ್ನ ನೋಡಿದರೇನೆ ಗೊತ್ತಾಗುತ್ತೆ ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಯಾವ ಮಟ್ಟಿಗೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂಬುದು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply