ಬೆಂಗಳೂರು: ಕರ್ನಾಟಕ ಮತ್ತು ನೆರೆಯ ಗೋವಾ ನಡುವೆ ತೀವ್ರ ಬಿಕ್ಕಟ್ಟಿಗೆ ಕಾರಣವಾಗಿರುವ ಮಹತ್ವಾಕಾಂಕ್ಷೆಯ ಮಹದಾಯಿ ಯೋಜನೆಗೆ ಅನುಮೋದನೆ ನೀಡಿ ಅದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಿದೆ.
ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರೊಂದಿಗೆ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಈ ಸಂಬಂಧ ಮನವಿ ಸಲ್ಲಿಸಿದರು.
ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದಷ್ಟು ಶೀಘ್ರ ಅನುಮೋದನೆ ನೀಡುವಂತೆ ಮನವಿ ಮಾಡಿದ್ದೇನೆ ಎಂದರು.
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣಾಮೇಲ್ದಂಡೆ ಕುರಿತು ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವ ಪ್ರಸ್ತಾವ ಅಂತಿಮ ಹಂತದಲ್ಲಿದ್ದು, ಇದಕ್ಕೆ ಮುಂದಿನ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗುವ ವಿಶ್ವಾಸವಿದೆ ಎಂದರು.




