ಬಿ ಎಲ್ ಸಂತೋಷ್ ವಿರುದ್ಧ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ‌ ಬಂಧನ

1 year ago

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣ ಸೇರಿದಂತೆ ಇತರೆ ಅಕ್ರಮ ಆರೋಪಗಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ‌ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಿಮರೋಡಿ ವಿರುದ್ಧ ಹಲವು ಆರೋಪಗಳು ಕೇಳಿಬಂದಿದ್ದು ಇವುಗಳಿಗೆ ಜೀವ ಕೊಡಲು ಪೊಲೀಸರು ಮುಂದಾಗಿದ್ದಾರೆ. ಸದ್ಯ ಸಂಘ ಪರಿವಾರ ನಾಯಕ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧದ ಟೀಕೆಯ ಹಿನ್ನೆಲೆಯಲ್ಲಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾದ ಬೆನ್ನಲ್ಲೇ ‌ಮಹೇಶ್ ಶೆಟ್ಟಿ ತಿಮರೋಡಿಯವರ ನಿವಾಸಕ್ಕೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ತಿಮರೋಡಿ ವಿರುದ್ಧ ದೂರು ಸಲ್ಲಿಸಲಾಗಿದೆ. 

ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ತಿಮರೋಡಿ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಅವರನ್ನು ವಿಚಾರಣೆಗೆ ಕರೆದೊಯ್ಯಲು ಪೊಲೀಸರು ಆಗಮಿಸಿದ ವೇಳೆ ಹೈಡ್ರಾಮಾ ನಡೆಯಿತು. ತಿಮರೋಡಿ ಬೆಂಬಲಿಗರು ಪೊಲೀಸ್ ಮತ್ತು ಬಿಜೆಪಿ ವಿರುದ್ಧ ಘೋಷಣೆ ಮೊಳಗಿಸಿದರು.

ಪ್ರಕರಣದ ವಿವರ: ಕಳೆದ ಆಗಸ್ಟ್ 16ರಂದು ಫೇಸ್‌ಬುಕ್ ಪೇಜ್‌ನಲ್ಲಿ ಮಹೇಶ ಶೆಟ್ಟಿ ತಿಮರೋಡಿ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಗ್ರಾಮಾಂತರ ಬಿಜಿಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ದೂರು ನೀಡಿದ್ದಾರೆ. 

ಅಕ್ರಮ ಶವ ಹೂಳಿದ್ದ: ಈ ನಡುವೆ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧವೇ ಅಕ್ರಮವಾಗಿ ಶವ ಹೂತಿಟ್ಟ ಆರೋಪ ಕೇಳಿಬಂದಿದೆ. ಈ ಕುರಿತು ಭಾಸ್ಕರ್ ನಾಯ್ಕ ಎಂಬುವವರು ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.

2018ರಲ್ಲಿ ಉಜಿರೆಯ ಬಿಲ್ಲರೋಡಿ ಎಂಬಲ್ಲಿ ಸೋಂಪ ಅಲಿಯಾಸ್ ಬಾಲಕೃಷ್ಣ ಗೌಡ ಎಂಬ ವ್ಯಕ್ತಿಯ ಶವವನ್ನು ಜೆಸಿಬಿ ಯಂತ್ರದ ಮೂಲಕ ಮಣ್ಣಿನಡಿ ಹೂತಿರುವ ಅನುಮಾನ ವ್ಯಕ್ತವಾಗಿದ್ದು, ಇದರ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಕೈವಾಡವಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರುದಾರ ಭಾಸ್ಕರ್ ನಾಯ್ಕ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದ ಸೂಕ್ತ ಸಾಕ್ಷ್ಯಗಳನ್ನು ನಾನು ತನಿಖಾ ಸಮಯದಲ್ಲಿ ಎಸ್‌ಐಟಿಗೆ ಒದಗಿಸುತ್ತೇನೆ. ಘಟನೆಯ ಸಮಯದಲ್ಲಿ ನಡೆದಿದ್ದ ಅಕ್ರಮ ಚಟುವಟಿಕೆಗಳ ಬಗ್ಗೆ ಸಾಕ್ಷ್ಯಾಧಾರಗಳಿವೆ ಎಂದು ತಿಳಿಸಿದ್ದಾರೆ.

ಅಕ್ರಮ ಮರ ಸಾಗಣೆ: ಮತ್ತೊಂದೆಡೆ ಮಹೇಶ್ ಶೆಟ್ಟಿ ತಿಮರೋಡಿ ಅವರು ಸರ್ಕಾರಿ ಜಾಗದಲ್ಲಿ ಮರಗಳನ್ನು ಕಡಿದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಒಬ್ಬ ವ್ಯಕ್ತಿಯನ್ನು ಮಣ್ಣಿನಡಿಗೆ ಹಾಕಿ ಹೂತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆಯನ್ನು ಸ್ಥಳೀಯರೂ ನೋಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಿಲ್ಲರೋಡಿ ಎಂಬ ಪ್ರದೇಶದಲ್ಲಿ ಉತ್ಪನನ ನಡೆಸಿದರೆ ಶವ ಹೊರ ಬರುವ ಸಾಧ್ಯತೆ ಇದೆ. ಆದ್ದರಿಂದ ತಕ್ಷಣ ಕ್ರಮ ಕೈಗೊಂಡು ಸತ್ಯಾಂಶ ಬಹಿರಂಗಪಡಿಸಬೇಕು ಎಂದು ದೂರುದಾರರು, ಎಸ್‌ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Leave a Reply