ಬೆಂಗಳೂರು: ಲೋಕಸಭಾ ಚುನಾವಣೆ ಸನಿಹದಲ್ಲಿರುವ ಸಮಯದಲ್ಲಿ ಮಂಡ್ಯ ಜಿಲ್ಲೆಯ ಕೆರೆಗೋಡಿನಲ್ಲಿ ನಡೆದ ಹನುಮಧ್ವಜ ತೆರವು ಪ್ರಕರಣದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಕೇಸರಿ ಪ್ರಯೋಗಕ್ಕೆ ಮುಂದಾಗಿದೆ. ಬಿಜೆಪಿಯ ಈ ಯತ್ನಕ್ಕೆ ಈ ಬಾರಿ ಜೆಡಿಎಸ್ ಕೂಡ ಸಾಥ್ ನೀಡಿರುವುದು ಕುತೂಹಲ ಮೂಡಿಸಿದೆ. ಧ್ವಜ ತೆರವು ವಿರೋಧಿಸಿ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೂಡ ಭಾಗಿಯಾದರು.
ಈ ಮೂಲಕ ಧ್ವಜ ತೆರವುಗೊಳಿಸಿದ ಪ್ರಕರಣದ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದರು.
ರಾಜಧಾನಿ ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಪಾದಯಾತ್ರೆ ಮತ್ತು ಪ್ರತಿಭಟನೆ ನಡೆಸಿದರು.
ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಾದ ಭಜರಂಗದಳ, ವಿಶ್ವ ಹಿಂದು ಪರಿಷತ್ ಸೇರಿದಂತೆ ಮತ್ತಿತರರು ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದರು.
ಬೆಳಗ್ಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಆರ್.ಅಶೋಕ್, ವಿಧಾನಪರಿಷತ್ತಿನ ಸದಸ್ಯೆ ಡಾ.ತೇಜಸ್ವಿನಿ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ.ರಾಮಮೂರ್ತಿ, ಜನಪ್ರತಿನಿಧಿಗಳು, ಮಾಜಿ ಶಾಸಕರು, ನಗರಪಾಲಿಕೆ ಮಾಜಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.




