ಬೆಂಗಳೂರು: ವಿಧಾನಸಭೆ ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಈ ಯೋಜನೆಗಳು ದುರುಪಯೋಗವಾಗದಂತೆ ನೋಡಿಕೊಳ್ಳಲು ಮುಂದಾಗಿದೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಕೆಲವು ಯೋಜನೆಗಳ ಫಲಾನುಭವಿಗಳು ಮರಣ ಹೊಂದಿದ ನಂತರವೂ ಅವರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗುತ್ತಿದೆ. ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಪಡೆದುಕೊಂಡು ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಈ ವೇಳೆ ತಕ್ಷಣವೇ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಕಾರ್ಯ ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಂಚಾಯತಿ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳು ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಿದರು.
ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ ರೂಪಾಯಿ, ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ ರೂಪಾಯಿ ಮತ್ತು ಶಕ್ತಿ ಯೋಜನೆಯಡಿ 5.44 ಕೋಟಿ ಫಲಾನುಭವಿಗಳಿಗೆ ರೂ.13,903 ಕೋಟಿ ವೆಚ್ಚ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಇದನ್ನು ಆಲಿಸಿದ ನಂತರ ಸಿದ್ದರಾಮಯ್ಯ,ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ಸೂಚಿಸಿದರು.
ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು. ಜಿಎಸ್ಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸೂಚನೆ ನೀಡಿದರು.
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ಮಾಡಬೇಕು. ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.



