ಕೊಪ್ಪಳ: ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನ ಬಲವರ್ಧನೆಗಾಗಿ ವಿವಿಧ ಅನುಷ್ಠಾನಾಧಿಕಾರಿಗಳೊಂದಿಗೆ ಸಮನ್ವಯ ಸಭೆಯು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರಿನ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಕಚೇರಿಯ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿ.ಆರ್.ಸಿ, ಬಿ,ಆರ್,ಸಿ ಮತ್ತು ಶಿಕ್ಷಣ ಸಂಯೋಜಕರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಶೇಖರಗೌಡ ಜಿ. ರಾಮತ್ನಾಳ, ಗ್ರಾಮ ಪಂಚಾಯತ್ ಅಭಿಯಾನ ಬಲವರ್ಧನೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪಾತ್ರ ಮಹತ್ವದ್ದಾಗಿದೆ ಎಂದರು.
ಗ್ರಾಮೀಣಾಭಿವೃದ್ಧಿಯಲ್ಲಿ ಮಕ್ಕಳ ಭಾಗವಹಿಸುವಿಕೆಗೆ ಅವಕಾಶ ನೀಡುವ ಸಂಬಂಧ ನಡೆಸುವ ಮಕ್ಕಳ ಗ್ರಾಮ ಸಭೆಗಳು ಅಚ್ಚುಕಟ್ಟಾಗಿ ಆಯೋಜನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಕ್ಕಳ ಆರೋಗ್ಯ ರಕ್ಷಣೆ, ಶಿಕ್ಷಣ ಅಭಿವೃದ್ಧಿ ಸಾಧನೆಯಲ್ಲಿ ಆಗುತ್ತಿರುವ ತಾರತಮ್ಯವನ್ನು ಕೊನೆಗೊಳಿಸಲು ಮತ್ತು ಮಕ್ಕಳನ್ನು ಶೋಷಣೆಯಿಂದ ಕೊನೆಗೊಳಿಸಿ ಅವರ ಪರಿಸ್ಥಿತಿಯನ್ನು ತಳಮಟ್ಟದಿಂದಲೇ ಗಮನಿಸಿ ಅತ್ಯವಶ್ಯಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಎಲ್ಲ ಇಲಾಖೆಗಳು, ಜನ ಪ್ರತಿನಿಧಿಗಳು ಮತ್ತು ಸಮುದಾಯದ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿದರು.
ಮಕ್ಕಳ ಹಕ್ಕುಗಳ ರಕ್ಷಣೆಗೆ, ಸರ್ವಾಂಗೀಣ ಅಭಿವೃದ್ಧಿಗಾಗಿ ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಇದನ್ನು ಅಧಿಕಾರಿಗಳು ಅರಿತು ಕೊಪ್ಪಳ ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್ ಅಭಿಯಾನದ ಬಲವರ್ಧನೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ, ನಿರೂಪಣಾಧಿಕಾರಿ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.




