ಬೆಂಗಳೂರು: ಅಧಿಕಾರ ಹಂಚಿಕೆ, ಶಾಸಕರ ಮುನಿಸು, ಆಪರೇಷನ್ ಕಮಲ ಸೇರಿದಂತೆ ಹಲವು ವಿಚಾರದಲ್ಲಿ ಉಂಟಾದ ಬಿಕ್ಕಟ್ಟು ಪರಿಹಾರಕ್ಕೆ ವರಿಷ್ಠರು ಮುಂದಾಗಿದ್ದಾರೆ.
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಕ್ರಿಯೆ ನಡುವೆಯೂ ಬಿಡುವು ಮಾಡಿಕೊಂಡ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಬೆಂಗಳೂರಿಗೆ ದೌಡಾಯಿಸಿ ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ಸುರ್ಜೇವಾಲ ರಾಜಕೀಯ ಪರಿಸ್ಥಿತಿಗಳ ಮೇಲೆ ತೀವ್ರ ನಿಗಾ ಇಟ್ಟು ಯಾವುದೇ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಜವಾಬ್ದಾರಿಯನ್ನು ಮುಖ್ಯಮಂತ್ರಿಯವರ ಹೆಗಲಿಗೆ ಹೊರಿಸಿದರು ಎನ್ನಲಾಗಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ 30ಕ್ಕೂ ಹೆಚ್ಚು ಶಾಸಕರ ಜೊತೆ ದೀಪಾವಳಿ ಬಳಿಕ ಕೈಗೊಳ್ಳಲು ಉದ್ದೇಶಿಸಿರುವ ವಿದೇಶ ಪ್ರವಾಸ, ನಿಗಮ ಮಂಡಳಿ ನೇಮಕಾತಿ ವಿಷಯದಲ್ಲಿ ಶಾಸಕರು ಮತ್ತು ಕಾರ್ಯಕರ್ತರಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಲು ಸಲಹೆ ಮಾಡಿದರು ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಪರಮೇಶ್ವರ್ ನಿವಾಸದಲ್ಲಿ ನಡೆಸಿದ ಭೋಜನ ಕೂಟಕ್ಕೆ ಕಾರಣವಾದ ಅಂಶಗಳ ಬಗ್ಗೆಯೂ ಈ ವೇಳೆ ಚರ್ಚಿಸಲಾಯಿತು. ಆಗ ಇದೇ ಮೊದಲ ಬಾರಿಗೆ ಆಯ್ಕೆಯಾದ ಶಾಸಕರು ಅಧಿಕಾರ ಹಂಚಿಕೆ ಕುರಿತು ಮಾತನಾಡಿದ ಬಗ್ಗೆ ಸಿಎಂ ತೀವ್ರ ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.
ಬಾಯಿಗೆ ಬೀಗ: ಈ ಮಾತುಕತೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ, ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪಕ್ಷದ ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ, ರಾಜ್ಯದ ಜನರಿಗೆ ಅನುಕೂಲವಾಗುವಂತಹ ನೀತಿಗಳ ಬಗ್ಗೆ ಯೋಚಿಸಿ, ಸಲಹೆ ನೀಡುವತ್ತ ಗಮನಹರಿಸಬೇಕು. ಸಚಿವರು ತಮ್ಮ ಇಲಾಖೆ ಹಾಗೂ ಉಸ್ತುವಾರಿ ಜಿಲ್ಲೆಗಳ ಬಗ್ಗೆ ಗಮನಹರಿಸಬೇಕು. ಅಧಿಕಾರ ಹಂಚಿಕೆ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಆ ರೀತಿ ಮಾತನಾಡುವುದು ಪಕ್ಷದ ಶಿಸ್ತು ಉಲ್ಲಂಘಿಸಿದಂತಾಗುತ್ತದೆ ಎಂದು ಹೇಳಿದರು.
ಅಶಿಸ್ತಿನ ಹೆಳಿಕೆಗಳನ್ನು ಪಕ್ಷ ಸಹಿಸುವುದಿಲ್ಲ. ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾರೇ ಮಾಡಿದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಬಿದ್ದರೆ ವಿಪ್ ಜಾರಿ ಮಾಡಬೇಕಾಗುತ್ತದೆ. ನಿಮ್ಮ ಧ್ವನಿಗೆ ಪಕ್ಷದಲ್ಲಿ ಅವಕಾಶವಿದೆ. ನೀವು ನಿಮ್ಮ ದೂರು, ಸಲಹೆ, ಅಭಿಪ್ರಾಯಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಅಥವಾ ನನ್ನ ಬಳಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕೇ ಹೊರತು ಸಾರ್ವಜನಿಕವಾಗಿ ಅಲ್ಲ ಎಂದು ತಾಕೀತು ಮಾಡಿದರು.
ಮುಂದಿನ 15 ದಿನಗಳಲ್ಲಿ ಸಂಸತ್ ಚುನಾವಣೆ ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಹೆಸರು ಸೂಚಿಸಲು ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ನಡೆಸಲು ತಿಳಿಸಿದ್ದೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ತಳಮಟ್ಟದಲ್ಲಿ ಪರಿಣಾಮಕಾರಿ ಜಾರಿ ಮಾಡಿ ಜನರಿಗೆ ತಲುಪಿಸಲು ನಿರಂತರವಾಗಿ ಗ್ಯಾರಂಟಿ ಯೋಜನೆಗಳನ್ನು ನಾವು ಪರಿಶೀಲನೆ ಮಾಡುತ್ತೇವೆ. ಈ ಯೋಜನೆಗಳ ಜಾರಿಗೆ ಎಲ್ಲೇ ತೊಂದರೆ ಆದರೂ ಅದಕ್ಕೆ ಸಂಬಂಧಿಸಿದ ಸಚಿವರ ಸಮಸ್ಯೆ ಬಗೆಹರಿಸಲಿದ್ದಾರೆ ಎಂದರು.
ಇನ್ನು ನಿಗಮ ಮಂಡಳಿಗಳ ನೇಮಕ ಬಗ್ಗೆ ಇಂದು ಚರ್ಚೆ ಮಾಡಲಾಯಿತು. ಈ ವಿಚಾರವಾಗಿ ಇನ್ನು ನಾಲ್ಕೈದು ಸುತ್ತಿನ ಚರ್ಚೆ ನಡೆಯಬೇಕಿದೆ. ಸದ್ಯ ನನಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಜವಾಬ್ದಾರಿ ವಹಿಸಿದ್ದು, ಇದೇ ತಿಂಗಳು 17ರಂದು ಚುನಾವಣೆ ಪೂರ್ಣಗೊಂಡ ತಕ್ಷಣವೇ ನಾನು ಕರ್ನಾಟಕಕ್ಕೆ ಆಗಮಿಸಿ ನಿಗಮಮಂಡಳಿ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದರು.




