ಬೆಂಗಳೂರು: ಇಡೀ ರಾಜ್ಯದಲ್ಲೇ ತಲ್ಲಣ ಮೂಡಿಸಿದ ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾರೇ ಇದ್ದರೂ ಬಿಡುವ ಪ್ರಶ್ನೆಯೇ ಇಲ್ಲ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ತಂಡಕ್ಕೆ ಎಲ್ಲಾ ಸ್ವಾತಂತ್ರ್ಯ ನೀಡಲಾಗಿದೆ ಎಂದರು.
ಅಧಿಕಾರಿಗಳು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಪ್ರಕರಣದಲ್ಲಿ ಯಾರೆಲ್ಲಾ ಕಾರಣಕರ್ತರಾಗಿದ್ದಾರೋ ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.



