ನಿಫಾ ವೈರಸ್ ಹರಡದಂತೆ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ

3 years ago

#Strict #vigilance #state #borders #prevent #spread #Nifa #virus

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಇಬ್ಬರನ್ನು ಬಲಿ ಪಡೆದಿರುವ ಹಿನ್ನೆಲೆಯಲ್ಲಿ ವೈರಸ್ ಹರಡದಂತೆ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಫಾ ವೈರಸ್‍ನಿಂದ ಉಂಟಾಗಬಹುದಾದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಜಾಗ್ರತೆ ವಹಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ನೆರೆ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ. ಗಡಿ ಭಾಗಗಳಲ್ಲಿ ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೊತೆಗೆ ಯಾವುದೇ ಪರಿಸ್ಥಿತಿಗೂ ಸಿದ್ದವಾಗಿರುವಂತೆ ಸೂಚಿಸಿರುವುದಾಗಿ ತಿಳಿಸಿದರು.

ನಿಫಾ ವೈರಸ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ತೀವ್ರ ಪ್ರತಿಕ್ರಿಯಾ ತಂಡದ ಸಭೆಯನ್ನು ನಡೆಸಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ.ರೋಗ ಲಕ್ಷಣಗಳಿರುವ ವ್ಯಕ್ತಿಗಳನ್ನು ಪರಿಚಯಿಸಬೇಕು ಮತ್ತು ಅವರನ್ನು ಪ್ರತ್ಯೇಕವಾಗಿರಿಸಿ ನಿಗಾವಹಿಸಬೇಕು ಎಂದು ಆದೇಶಿಸಿರುವುದಾಗಿ ಹೇಳಿದರು.

ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳು ಮತ್ತು ಎಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ನಿಫಾ ವೈರಸ್ ನಿರ್ವಹಣೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ನ್ನು ಕಾಯ್ದಿರಿಸುವಂತೆ ಹಾಗೂ ಆಮ್ಲಜನಕ ಮತ್ತು ಇತರ ಅಗತ್ಯ ಔಷಧಿಗಳನ್ನೊಳಗೊಂಡಂತೆ ಎಲ್ಲ ಪ್ರಾಥಮಿಕ ವೈದ್ಯಾಕಾರಿಗಳಿಗೆ ಜ್ವರದ ಕಣುವಲು ಘಟಕಗಳನ್ನು ಬಲಪಡಿಸಲು ಸೂಚನೆ ನೀಡಲಾಗಿದೆ ಎಂದರು.

ಜೊತೆಯಲ್ಲಿ ಅಗತ್ಯವಿರುವ ಔಷಧಿಗಳನ್ನ ಸಂಗ್ರಹಿಸಿಟ್ಟುಕೊಳ್ಳುವಂತೆ, ಜಿಲ್ಲಾ ಸಾರ್ವಜನಿಕ ಆರೋಗ್ಯ, ಪ್ರಯೋಗಾಲಯಗಳಲ್ಲಿ ವರದಿಯಾಗಿರುವ ಯಾವುದೇ ಶಂಕಿತ ಪ್ರಕರಣಗಳ ಮಾದರಿಯನ್ನು ವುಣೆಯಲ್ಲಿನ ಎನ್‍ಐವಿ ಪ್ರಯೋಗಾಲಯಕ್ಕೆ ಕಳುಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

Leave a Reply