ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ಉಂಟಾದ ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಇದೇ 12ಕ್ಕೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಾಲ್ತುಳಿತ ಘಟನೆ ಕುರಿತಂತೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಘಟನೆ ಕುರಿತಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು. ನಮ್ಮ ಲಿಖಿತ ಪ್ರತಿಕ್ರಿಯೆಯನ್ನು ಇಂದು ಸಲ್ಲಿಸಲಾಗಿಲ್ಲ. ಘಟನಾನಂತರದ ಬೆಳವಣಿಗೆಗಳಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ಇದರ ವರದಿ ಸಲ್ಲಿಕೆಗೆ ಒಂದು ತಿಂಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರೂ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರು.
ಘಟನೆ ಕುರಿತಂತೆ ಹೈಕೋರ್ಟ್ ನ ವಿವಿಧ ಪೀಠದಲ್ಲಿ ಆರ್‌ಸಿಬಿ, ಡಿಎನ್‌ಎ ಅಧಿಕಾರಿಗಳ ಜಾಮೀನು ಅರ್ಜಿಗಳು ವಿಚಾರಣೆಗೆ ಬಾಕಿ ಇವೆ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರ ಕೈಗೊಂಡಲದಲ್ಲಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರೆ ಆ ಅರ್ಜಿಗಳ ಮೇಲೆ ಇದು ಪ್ರತೀಕೂಲ ಪರಿಣಾಮ ಉಂಟು ಮಾಡುವ ಸಾಧ್ಯತೆ ಇದೆ ಎಂದರು.
ಪ್ರಕರಣದ ಬಗ್ಗೆ ತನಿಖೆ ನಡೆಸಲು ನೇಮಿಸಲಾಗಿರುವ ಸ್ವತಂತ್ರ ವಿಚಾರಣಾ ಆಯೋಗದಿಂದ ವರದಿ ಬರಲಿ. ಇದು ಒಂದು ತಿಂಗಳ ವಿಚಾರವಷ್ಟೆ. ಅಂತೆಯೇ, ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ದಯಮಾಡಿ, ಈ ಅರ್ಜಿಯ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು.
ಇದೇ ವೇಳೆ ಪದಾಂಕಿತ ಹಿರಿಯ ವಕೀಲ ಕೆ.ದಿವಾಕರ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಕುಮಾರ್ ಕೊಂಡಜ್ಜಿ ಅವರು ಈ ಅರ್ಜಿಯಲ್ಲಿ ಮಧ್ಯಂತರ ಅರ್ಜಿದಾರರಾಗಿ ಸೇರ್ಪಡೆಯಾಗಲು ಅನುಮತಿ ಕೋರುತ್ತಿದ್ದಾರೆ ಎಂದರು.
ಅಂತೆಯೇ, ಇನ್ನೊಬ್ಬ ಪದಾಂಕಿತ ಹಿರಿಯ ವಕೀಲ ಎಸ್.ಎಸ್. ನಾಗಾನಂದ, ಪ್ರಕರಣದ ಸಂತ್ರಸ್ತರೂ ತಮ್ಮ ವಾದ ಮಂಡಿಸಲು ಬಯಸಿದ್ದಾರೆ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.
ಈ ಮಧ್ಯೆ ಮತ್ತೊಬ್ಬ ವಕೀಲ ಆರ್.ಹೇಮಂತ ರಾಜ್, ಈ ಘಟನೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯೇ (ಕೆಎಸ್ಸಿಎ) ನಿಜವಾದ ದೋಷಿ. ಆರ್ಸಿಬಿಯನ್ನೂ ಪಕ್ಷಗಾರರನ್ನಾಗಿ ಮಾಡಬೇಕು. ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಬೇಕು ಎಂದು ಮನವಿ ಮಾಡಿದರು.
ಎಲ್ಲರ ಮನವಿಗಳನ್ನು ಆಲಿಸಿದ ನ್ಯಾಯಪೀಠ, ಈ ಪಿಐಎಲ್ ನಲ್ಲಿ ಮಧ್ಯಪ್ರವೇಶ ಬಯಸಿರುವ ಅರ್ಜಿಗಳ ಸಂಬಂಧ ಈಗಲೇ ಏನನ್ನೂ ಹೇಳುವುದಿಲ್ಲ. ಸರ್ಕಾರ ತನ್ನ ಪ್ರತಿಕ್ರಿಯೆಯನ್ನು ಮುಚ್ಚಿದ ಲಕೋಟೆಯಲ್ಲಿ ಇದೇ 12ರಂದು ನೇರವಾಗಿ ನ್ಯಾಯಪೀಠಕ್ಕೆ ಸಲ್ಲಿಸಲಿ. ಆನಂತರ ಮಧ್ಯಂತರ ಸೇರ್ಪಡೆ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿ ವಿಚಾರಣೆಯನ್ನು 12ಕ್ಕೆ ಮುಂದೂಡಿತು.




