NDRF ನಿಧಿ ಬಿಡುಗಡೆಗೊಳಿಲು ಕೇಂದ್ರಕ್ಕೆ ನಿರ್ದೇಶಿಸುವಂತೆ ಸುಪ್ರೀಂಕೋರ್ಟ್ ಮೊರೆ: ಸಿದ್ದರಾಮಯ್ಯ

2 years ago

ಬೆಂಗಳೂರು: ಬರ ಪರಿಹಾರ ಕಾಮಗಾರಿಗೆ ಆರ್ಥಿಕ ನೆರವು ಮತ್ತು ತೆರಿಗೆ ಪಾಲು ನೀಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ಸರ್ಕಾರ ಇದೀಗ ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ಬರಗಾಲದಿಂದ ತತ್ತರಿಸಿರುವ ರಾಜ್ಯದಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿ ಅಡಿಯಲ್ಲಿ ಆರ್ಥಿಕ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ NDRF ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದರು.

ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲುಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು. ಸಂವಿಧಾನದ ಪರಿಚ್ಛೇದ 32ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ ಎಂದರು.

ಬರದ ಸಂದರ್ಭದಲ್ಲಿ , ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗೆ ಸ್ಪಂದಿಸದಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ ಇದುವರೆಗೂ ಕೇಂದ್ರ ಕಾನೂನುಬದ್ಧವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದು ಆರೋಪಿಸಿದರು.

ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸಿದ್ದೇವೆ. ಇಲ್ಲಿನ ಪರಿಸ್ಥಿತಿಯ ಬಗ್ಗೆ ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ ಎಂದರು

ನಿಯಮಾವಳಿ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್ ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು ಪರಿಶೀಲನೆ ನಡೆಸಿ ಕೇಂದ್ರಕ್ಕೆ IMCT ವರದಿ ನೀಡಿದೆ. ಈ ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎನ್ನುವುದು ನಿಯಮ. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು NDRF ನಿಯಮಾವಳಿಗಳನ್ನು ವಿವರಗಳನ್ನು ನೀಡಿದರು.

ಕೇಂದ್ರ ತಂಡ ವರದಿ ಕೊಟ್ಟರೂ ನಮಗೆ ಕೇಂದ್ರ ಸರ್ಕಾರ ಸ್ಪಂದಿಸದಿದ್ದಾಗ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದೆಹಲಿಗೆ ಹೋದರೂ ಕೇಂದ್ರ ಸಚಿವರ ಭೇಟಿಗೆ ಅವಕಾಶವನ್ನೇ ಕೊಡಲಿಲ್ಲ. ಬಳಿಕ ನಾನೇ ಡಿಸೆಂಬರ್ 20 ರಂದು ನಾನು ಮತ್ತು ಕೃಷ್ಣಬೈರೇಗೌಡ ಅವರು ಮತ್ತೆ ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆವು. ಆದರೂ ನಮಗೆ ಪರಿಹಾರ ಕೊಡಲಿಲ್ಲ. ಬಳಿಕ ನಾನು ಬೆಂಗಳೂರಿನಲ್ಲೇ ಪ್ರಧಾನಿ ಮೋದಿಯವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಮಾಡಿದೆ. ಆದರೂ ಪರಿಹಾರ ಸಿಗಲಿಲ್ಲ ಎಂದರು.

ಕೇಂದ್ರದಿಂದ ನಯಾಪೈಸೆ ಬಿಡುಗಡೆ ಆಗದಿದ್ದಾಗ 450 ಕೋಟಿ, ಕುಡಿಯುವ ನೀರಿಗೆ 870 ಕೋಟಿಬಿಡುಗಡೆ ಮಾಡಿದೆವು. ಡಿಸಿಗಳ ಬಳಿ ಇನ್ನೂ 800 ಕೋಟಿ ರೂಪಾಯಿ ಹಣ ಬರನಿರ್ವಹಣೆ ಉದ್ದೇಶಕ್ಕಾಗಿಯೇ ಮೀಸಲಿಡಲಾಗಿದೆ. ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ ಎಂದರು.

4600 ಕೋಟಿ ಇನ್ ಪುಟ್ ಸಬ್ಸಿಡಿಗೆ ಹಣ ಬೇಕು. ಕಾಯ್ದೆ ಪ್ರಕಾರ ಇಂಥಾ ಸನ್ನಿವೇಶದಲ್ಲಿ ತಡ ಮಾಡದೆ ಹಣ ಬಿಡುಗಡೆ ಆಗಬೇಕಿತ್ತು. ಆದರೆ ಐದು ತಿಂಗಳಾದರೂ ನಮಗೆ NDRF ನಿಧಿ ಬಂದೇ ಇಲ್ಲ. ಹೀಗಾಗಿ ನಾವು ಬೇರೆ ದಾರಿ ಇಲ್ಲದೆ ಸುಪ್ರೀಂ ಕೋರ್ಟ್ ಬಾಗಿಲು ಬಡಿಯಬೇಕಾಯಿತು ಎಂದರು.

ನಮ್ಮ ನಾಡಿಗೆ, ನಮ್ಮ ನಾಡಿನ ಜನರಿಗೆ ಆಗಿರುವ ಅನ್ಯಾಯವನ್ನು ಸರಿಮಾಡಿ ಎಂದು, NDRF ನಿಧಿ ಕೊಡಿ ಎಂದು ಮೇಲಿಂದ ಮೇಲೆ ಮನವಿ ಮಾಡಿ ಎಲ್ಲಾ ರೀತಿಯಲ್ಲೂ ಬೇಡಿಕೆ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ. ಈ ಕಾರಣಕ್ಕೆ ನಾವು ಸುಪ್ರೀಂಕೋರ್ಟ್ ಬಳಿ ನ್ಯಾಯ ಕೇಳದೆ ಬೇರೆ ದಾರಿ ಇರಲಿಲ್ಲ ಎಂದರು.

ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ, ಇವತ್ತು ಬರತ್ತೆ, ನಾಳೆ ಬರತ್ತೆ ಅಂತ ಐದು ತಿಂಗಳು ಕಾದಿದ್ದಾಯ್ತು. ನಮಗೆ ಬೇರೆ ಇರಲಿಲ್ಲ. ನಮಗೆ ಕಾನೂನು ಮೊರೆ ಹೋಗುವುದು ಇಷ್ಟ ಇರಲಿಲ್ಲ. ಆದರೆ ನಾವು ಕಾನೂನು ಮೊರೆ ಹೋಗುವ ಅನಿವಾರ್ಯತೆಯನ್ನು ಕೇಂದ್ರ ಸೃಷ್ಟಿಸಿದೆ ಎಂದರು.

Leave a Reply