ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್ ಎಸ್ ಎಲ್ ಸಿಗೆ ಪರೀಕ್ಷೆ ನಡೆಸದಿರುವುದು ಸುಲಭವಲ್ಲ. ಎಸ್ಎಸ್ಎಲ್ಸಿ ಮಕ್ಕಳನ್ನು ಕಳೆದ ವರ್ಷದ ಆಧಾರದ ಮೇಲೆ ಪಾಸ್ ಮಾಡೋಣವೆಂದರೆ ಕಳೆದ ಬಾರಿ 9ನೇ ತರಗತಿ ಪರೀಕ್ಷೆಯೂ ನಡೆದಿಲ್ಲ. ಕೆಲ ಸಮೀಕ್ಷೆಗಳಲ್ಲಿ ಪರೀಕ್ಷೆ ಬೇಡ ಅನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆದರೆ, ಎಸ್ ಎಸ್ ಎಲ್ ಸಿಗೆ ಪರೀಕ್ಷೆ ನಡೆಸದೇ ಇರುವುದು ಸುಲಭವಿಲ್ಲ. ಈ ಬಾರಿ 8 ಲಕ್ಷ 75 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾರೆ ಎಂದರು.
ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳನ್ನು ಸೇರಿಸಿ ಒಂದು ಪೇಪರ್ ನೀಡಲಾಗುತ್ತದೆ, ಬಹು ಆಯ್ಕೆ ಪ್ರಶ್ನೆಗಳನ್ನು ಕೇಳಲಾಗುವುದು. ಪ್ರಶ್ನೆಗಳು ಸರಳ ಹಾಗೂ ನೇರವಾಗಿರಲಿದ್ದು, ವಿದ್ಯಾರ್ಥಿಗಳು ಆತಂಕಪಡುವ ಆಗತ್ಯವಿಲ್ಲ. ಇದೇ ರೀತಿ ಇನ್ನೊಂದು ಪತ್ರಿಕೆ ಭಾಷಾ ವಿಷಯಗಳು ಇರಲಿವೆ ಎಂದಿದ್ದಾರೆ.
ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, 20 ದಿನ ಮುಂಚಿತವಾಗಿ ಪರೀಕ್ಷೆ ದಿನಾಂಕ ಘೋಷಿಸಲಾಗುವುದು. ಕೊರೊನಾದಿಂದ ಪರೀಕ್ಷೆ ಬರೆಯಲು ಆಗದಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅವಕಾಶವಿ ನೀಡಲಾಗುವುದು ಎಂದರು.
ಎಸ್ ಎಸ್ ಎಲ್ ಸಿಯಲ್ಲಿ ಯಾರನ್ನೂ ಫೇಲ್ ಮಾಡುವುದಿಲ್ಲ. ಮೊದಲೇ ಮಾದರಿ ಪ್ರಶ್ನೆ ಪತ್ರಿಕೆಯನ್ನು ನೀಡಲಾಗುವುದು. ಅದನ್ನು ನೋಡಿಕೊಂಡು ಸಿದ್ಧತೆ ಮಾಡಿಕೊಳ್ಳಿ. ಒತ್ತಡವಾಗಲಿ, ಆತಂಕವಾಗಲೀ ಬೇಡ. ಅತ್ಯಂತ ಸರಳ ಹಾಗೂ ನೇರ ಪ್ರಶ್ನೆಗಳನ್ನಷ್ಟೇ ಕೇಳಲಾಗುವುದು. ಒಂದು ಡೆಸ್ಕ್ಗೆ ಒಬ್ಬ ವಿದ್ಯಾರ್ಥಿಯನ್ನು ಕೂರಿಸಲಾಗುವುದು. ಪರೀಕ್ಷೆ ಬರೆಯುವ ಎಲ್ಲರಿಗೂ ಎನ್95 ಮಾಸ್ಕ್ ನೀಡಲಾಗುವುದು ಎಂದರು.
ಬುದ್ಧಿಭ್ರಮಣೆಯ ನಿರ್ಧಾರ: ಎಚ್.ಡಿ.ಕುಮಾರಸ್ವಾಮಿ
ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.,
ಸರ್ಕಾರದ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆ, ಸಾಮಾಜಿಕ ಜಾಲತಾಣಗಲ್ಲಿ ಪ್ರತಿಕ್ರಿಯಿಸಿರುವ ಅವರು, ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಬಿಟ್ಟು, ಶಿಕ್ಷಣ ಸಚಿವರು ಎಡಬಿಡಂಗಿ ನಿರ್ಧಾರ ತೆಗೆದು ಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕು. ಎಸೆಸೆಲ್ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು ಎಂದಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಮಂತ್ರಿಯ ‘ಗುಮ್ಮ’ ಕಾರಣ. ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೋ? ಎಂದು ಪ್ರಶ್ನಿಸಿದ್ದಾರೆ.
ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಶಿಕ್ಷಣ ಸಚಿವರು ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.
ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ ಎಂದು ಅವರ ಸವಾಲೆಸೆದಿದ್ದಾರೆ.




