ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾಲವಶ

2 years ago

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಹಾಲಿ ಶಾಸಕ ಹಾಗೂ ಕಾಂಗ್ರೆಸ್ ನ ಪ್ರಭಾವಿ ನಾಯಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಹಠಾತ್ ಕಾಲವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ 20 ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ನಿಧನರಾದರು.

ಸುರಪುರ ಕ್ಷೇತ್ರದಿಂದ ರಾಜಾ ವೆಂಕಟಪ್ಪ ನಾಯಕ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994 ಕರ್ನಾಟಕ ಕಾಂಗ್ರೆಸ್ ಪಾರ್ಟಿ (ಕೆಸಿಪಿ), 1999, 2013, 2023 ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ್ದರು. ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಅವರು ಕೆಲವು ದಿನಗಳ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದರು.

ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಮಂದಿ ಗಣ್ಯರು ಕಂಬನಿ ಮಿಡಿದಿದ್ದಾರೆ.

ಸುರಪುರ ಶಾಸಕ ಹಾಗೂ ಕರ್ನಾಟಕ ಉಗ್ರಾಣ ನಿಗಮದ ಅಧ್ಯಕ್ಷ ರಾಜಾ ವೆಂಕಟಪ್ಪ ನಾಯಕ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಂತಾಪ ಸೂಚಿಸಿದ್ದಾರೆ.

ಕುಟಂಬ ವರ್ಗದವರಿಗೆ ಕಳಿಸಿರುವ ತಮ್ಮ ಸಂತಾಪ ಸೂಚನಾ ಪತ್ರದಲ್ಲಿ ವೆಂಕಟಪ್ಪ ನಾಯಕರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿರುವ ಖರ್ಗೆ ಅವರು, ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದಾಗಿ ಕಲಬುರಗಿ ವಿಭಾಗ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಿಗೆ ತುಂಬಲಾಗದ ನಷ್ಟವಾಗಿದೆ ಎಂದಿದ್ದಾರೆ.

ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Leave a Reply