ಬೆಂಗಳೂರು: ಬೆಳಗಾವಿ ಮತ್ತು ಹಾವೇರಿಯಲ್ಲಿ ನಡೆದ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿ ಬೀಟ್ಗಳನ್ನು ಹೆಚ್ಚಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ತಾಕೀತು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದು, ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳನ್ನು ಮಟ್ಟ ಹಾಕಿ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಆದೇಶಿಸಿದ್ದಾರೆ.
ಪೋಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ, ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಬೇಕು ಎಂದು ಸ್ಪಷ್ಟವಾಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ನಡೆಯುತ್ತಿರುವುದರಿಂದ ಕಟ್ಟೆಚ್ಚರ ವಹಿಸುವ ಅಗತ್ಯವಿದೆ. ಪರಿಸ್ಥಿತಿಯ ಲಾಭ ಪಡೆದು ಕೆಲವರು ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆಯಿರುವುದರಿಂದ ಈಗಿನಿಂದಲೇ ಸಜ್ಜಾಗಿ ಎಂದರು.
ಸಂಚಾರ, ಕಾನೂನು ಸುವ್ಯವಸ್ಥೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಇಂದು ಸುದೀರ್ಘವಾಗಿ ಮಾತನಾಡಿದ ಅವರು, ಕಾನೂನು ಉಲ್ಲಂಘಿಸುವವರು ಯಾರೇ ಆದರೂ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು.
ಲೋಕಸಭೆ ಚುನಾವಣೆಗೆ ಭದ್ರತೆ ನೀಡುವ ಜವಾಬ್ದಾರಿ ನಿಮ್ಮ ಮೇಲಿದೆ. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿ ಶಾಂತಿಗೆ ಭಂಗ ಮಾಡುವ ಪ್ರಯತ್ನಗಳು ನಡೆಯಬಹುದು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುತುವರ್ಜಿ ವಹಿಸುವ ಅಗತ್ಯವಿದೆ ಎಂದರು.
ಸೈಬರ್ ಅಪರಾಧಗಳು ಕೂಡ ಮಿತಿಮೀರುತ್ತಿದ್ದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಕ್ರಿಯೆ ಹೆಚ್ಚಬೇಕು. ಈಗಾಗಲೇ ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಡ್ರಗ್ಸ್ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದು ಇನ್ನಷ್ಟು ಹೆಚ್ಚಾಗಬೇಕು ಎಂದರು.
ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡು ಸೈಬರ್ ಅಪರಾಧಗಳನ್ನು ಆದಷ್ಟು ಮಟ್ಟ ಹಾಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ ಎಂದರು.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ ಅವರು, ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸೂಚಿಸಿದರು.
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಹಿರಿಯ ಅಧಿಕಾರಿಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದರು. ಜೊತೆಗೆ, ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ಹಾಗೆ ಮಾಡಬೇಡಿ ಎಂದರು.
ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಗೃಹ ಸಚಿವ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಹಾಜರಿದ್ದರು.




