ಸಿದ್ದರಾಮಯ್ಯ ವಿರುದ್ಧ ದೂರು: ಎಚ್ಚರಿಕೆಯ ನಡೆ ಇಡಲು ತೀರ್ಮಾನಿಸಿದ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವ ವಿಚಾರದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಎಚ್ಚರಿಕೆಯ ನಡೆ ಇಡಲು ತೀರ್ಮಾನಿಸಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ ಈಗಾಗಲೇ ಮುಖ್ಯಮಂತ್ರಿಗಳಿಗೆ ಶೋಕಾಸ್ ಜಾರಿಗೊಳಿಸಿರುವ ಅವರು ಇದೀಗ ಇದಕ್ಕೆ ಸಿಎಂ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಲ್ಲಿಸಿರುವ ವಿವರಣೆಯ ಕುರಿತು ಪರಿಶೀಲನೆ ನಡೆಸಿದ್ದಾರೆ.
ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪ್ರತಿಪಕ್ಷಗಳ ಸರ್ಕಾರಗಳನ್ನು ಅಸ್ಥಿರಗೊಳಿಸಲು ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ವಿಷಯದ ಕುರಿತು ಎಚ್ಚರಿಕೆಯ ನಡೆ ಇಡಲು ನಿರ್ಧರಿಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.
ಕೇಂದ್ರ ಗೃಹ ಇಲಾಖೆಯ ಜೊತೆಗೆ ಸತತ ಸಮಾಲೋಚನೆ ನಡೆಸುತ್ತಿರುವ ರಾಜ್ಯಪಾಲರು ಪ್ರಕರಣದ ಕುರಿತಂತೆ ಹಲವು ಸುತ್ತಿನಲ್ಲಿ ಹಿರಿಯ ವಕೀಲರು ಮತ್ತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಸಿಎಂ ಅನುಪಸ್ಥಿತಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಂಪುಟ ಸಭೆ ನಡೆಸಿ ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟಿಸ್ ಹಿಂದೆ ಪಡೆಯಲು ಸಲಹೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ ಪೂರಕವಾದ ದಾಖಲೆಗಳೊಂದಿಗೆ ಸಂಪುಟ ಸಭೆಯ ನಿರ್ಧಾರವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ರಾಜ್ಯಪಾಲರಿಗೆ ರವಾನಿಸಿದ್ದಾರೆ.
ದೆಹಲಿಯಿಂದ ಹಿಂತಿರುಗಿದ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿ ನೀಡಿರುವ ವರದಿಯನ್ನು ಪರಿಶೀಲಿಸಿದ್ದಾರೆ. ಇದಲ್ಲದೆ ದೂರು ಸಲ್ಲಿಸಿರುವ ಅಬ್ರಹಾಂ ಅವರ ಕುರಿತು ಕಾಂಗ್ರೆಸ್ ಮತ್ತು ಮಂತ್ರಿಗಳು ನೀಡಿರುವ ವರದಿಯನ್ನು ಕೂಡ ಪರಿಶೀಲನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ತಮ್ಮ ವಿರುದ್ಧ ಖಾಸಗಿ ದೂರು ಸಲ್ಲಿಸಲು ಮನವಿ ನೀಡಿರುವ ಅಬ್ರಹಾಂ ಒಬ್ಬ ಬ್ಲಾಕ್ ಮೇಲರ್ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ಈ ಹಿಂದೆ ರಾಜ್ಯಪಾಲರು ಅಬ್ರಹಾಂ ಅವರ ಕಾರ್ಯ ವೈಖರಿ ಕುರಿತಂತೆ ನೀಡಿದ್ದ ವರದಿಯೊಂದರ ಪ್ರತಿಯನ್ನು ಕಾಂಗ್ರೆಸ್ ನಾಯಕರು ಪ್ರದರ್ಶಿಸಿ ಇಂತಹ ವ್ಯಕ್ತಿಯ ದೂರಿನ ಬಗ್ಗೆ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಬಾರದು ಎಂದು ಆಗ್ರಹಿಸಿದ್ದರು.
ಇದರ ಬೆನ್ನಲ್ಲೇ ಮತ್ತೆ ರಾಜ್ಯಪಾಲರು ಅಬ್ರಹಾಂ ಅವರನ್ನು ರಾಜಭವನಕ್ಕೆ ಕರೆಸಿಕೊಂಡು ಅವರ ವಿರುದ್ಧ ಕೇಳಿ ಬಂದ ಆರೋಪ ಮತ್ತು ಅವರು ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿರುವ ದೂರಿನ ಕುರಿತು ಇನ್ನಷ್ಟು ಮಾಹಿತಿ ಪಡೆದುಕೊಂಡಿದ್ದಾರೆ.
ಈ ವೇಳೆ ಅಬ್ರಾಹಂ ಅವರು ತಾವು ದುರುದ್ದೇಶಪೂರ್ವಕವಾಗಿ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡುತ್ತಿಲ್ಲ. ಅವರ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಮಾಡಿದ್ದೇನೆ. ಸರ್ಕಾರದ ಅಧಿಕೃತ ದಾಖಲೆಗಳನ್ನು ಅಡಕ ಮಾಡಿ ದೂರು ಸಲ್ಲಿಸಿದ್ದೇನೆ ಎಂದು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಗೊತ್ತಾಗಿದೆ.
ಈ ಬೆಳವಣಿಗೆ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಾಹಂ, ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ 1988ರ ಸೆಕ್ಷನ್ 7, 9, 11, 12, ಮತ್ತು 15ರಲ್ಲಿ ಹಾಗೂ ಭಾರತೀಯ ನ್ಯಾಯ ಸಂಹಿತ 2023ರಡಿ ಸೆಕ್ಷನ್ 59, 61, 62, 201, 227, 228, 229, 239, 314, 316(5), 318(1)(2)(3), 319, 322, 324 (1)(2)(3), 335, 336, 338 ಮತ್ತು 340ರಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡುವಂತೆ ಕೋರಿದ್ದೇನೆ ಎಂದರು.
ರಾಜ್ಯಪಾಲರು ಮುಖ್ಯಮಂತ್ರಿಗಳಿಗೆ ಎರಡನೇ ಶೋಕಾಸ್ ನೋಟಿಸ್ ನೀಡಿಲ್ಲ. ನನ್ನ ವಿರುದ್ಧ ಅವರು ಮಾಡಲಾಗಿರುವ ಕೆಲವು ಆರೋಪಗಳ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ. ಅವುಗಳೆಲ್ಲದರ ಬಗ್ಗೆ ವಿವರಣೆ ನೀಡಿದ್ದೇನೆ. ಯಾವ ಕಾರಣಕ್ಕಾಗಿ ಮನವಿ ಸಲ್ಲಿಸಿದ್ದೇನೆ ಎಂಬ ಅಂಶವನ್ನು ರಾಜ್ಯಪಾಲರಿಗೆ ವಿವರಿಸಿದ್ದು, ಅವರು ನನ್ನ ಉತ್ತರದ ಬಗ್ಗೆ ತೃಪ್ತಿ ಹೊಂದಿದ್ದಾರೆ. ಅಲ್ಲದೆ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವ ವಿಶ್ವಾಸವಿದೆ ಎಂದರು.




