ಹೈನುಗಾರಿಕೆ ಕುಸಿಯಲು ಬಿಜೆಪಿ ಸರ್ಕಾರಗಳ ನೀತಿಗಳೇ ಕಾರಣ: ಸಿದ್ದರಾಮಯ್ಯ

3 years ago

ಬೆಂಗಳೂರು: ರಾಜ್ಯದಲ್ಲಿ ಹೈನುಗಾರಿಕೆ ಕುಸಿಯಲು ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿಗಳೇ ಕಾರಣ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾರ್ಚ್‍ನಲ್ಲಿ ಪ್ರತಿ ದಿನ 99 ಲಕ್ಷ ಲೀಟರುಗಳಷ್ಟು ಹಾಲು ಸಂಗ್ರಹವಾಗಬೇಕಾಗಿದ್ದ ಕಡೆ ಕೇವಲ 71 ಲಕ್ಷ ಲೀಟರುಗಳಷ್ಟು ಹಾಲನ್ನು ಮಾತ್ರ ಕೆಎಂಎಫ್ ಸಂಗ್ರಹಿಸುತ್ತಿದೆ. ಇದೂ ಕೂಡ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪ್ರಸ್ತುತ ಪ್ರತಿ ದಿನ ಸುಮಾರು 28 ಲಕ್ಷ ಲೀಟರುಗಳಷ್ಟು ಹಾಲಿನ ಉತ್ಪಾದನೆ ಕಡಿಮೆಯಾಗಿದೆ.ಇದರಿಂದಾಗಿ ರಾಜ್ಯದ ಪಶುಪಾಲಕರಿಗೆ ಪ್ರತಿ ದಿನ ಸುಮಾರು 11 ಕೋಟಿ ರೂಪಾಯಿಗಳಷ್ಟು ಹಣ ಕೈತಪ್ಪಿ ಹೋಗುತ್ತಿದೆ ಎಂದು ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ಮತ್ತು ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರಗಳ ಹಾದಿ ತಪ್ಪಿದ ನೀತಿಗಳಿಂದ ಹೈನುಗಾರಿಕೆ ಸಂಕಷ್ಟಕ್ಕೀಡಾಗಿದೆ ಎಂದಿದ್ದಾರೆ.

ಗುಜರಾತ್ ಮೂಲದ ರಾಜಕಾರಣಿಗಳು ಮತ್ತು ವ್ಯಾಪಾರಿಗಳ ಕಣ್ಣು ನಮ್ಮ ಕೆಎಂಎಫ್ ಮೇಲೆ ಬಿದ್ದಾಗಿನಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಂತಾಗಿದೆ. ಇವರಿಂದಾಗಿ ರಾಜ್ಯದ ರೈತರಿಗೂ ಸಂಕಷ್ಟ ಬಂದೊದಗಿದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ
ಕೊಳ್ಳುವ ಗ್ರಾಹಕರೂ ವಿಪರೀತ ಸಂಕಷ್ಟ ಅನುಭವಿಸುತ್ತಿದ್ದಾರೆ. ನಂದಿನಿ ಮಳಿಗೆಗಳಲ್ಲಿ ಕಲಬೆರಕೆ ತುಪ್ಪವೂ ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಜನರು ದೂರುತ್ತಿದ್ದಾರೆ. ಕೈ ಸುಡುವಷ್ಟು ಮಟ್ಟಿಗೆ ಬೆಲೆಗಳು ಏರಿಕೆಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

Leave a Reply