ಬೆಂಗಳೂರು: ಕೋವಿಡ್ ಮೊದಲ ಅಲೆಯ ಸಮಯದಲ್ಲಿ ನಡೆದ ಖರೀದಿ ಪ್ರಕ್ರಿಯೆಯಲ್ಲಿ 40 ಸಾವಿರ ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಬಿಜೆಪಿ ನಾಯಕರ ವಿರುದ್ಧ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿರುವ ಆರೋಪ ಬಿಜೆಪಿ ನಾಯಕರನ್ನು ಮುಜುಗರಕ್ಕೆ ಗುರಿಯಾಗಿಸಿದೆ.
ಈ ಆರೋಪ ಆಧರಿಸಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದರ ನಡುವೆ ಬಸನಗೌಡ ಪಾಟೀಲ ಯತ್ನಾಳ್ ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಬಿಜೆಪಿ ಹೈಕಮಾಂಡ್ ಕ್ರಮ ಕೈಗೊಳ್ಳದೇ ಇರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ಐದು ವರ್ಷಗಳಿಂದಲೂ ತಮ್ಮ ಪಕ್ಷದ ವಿರುದ್ಧ ಹರಿಹಾಯುತ್ತಲೇ ಇದ್ದಾರೆ. ಆದರೆ, ಬಿಜೆಪಿ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾರದಷ್ಟು ದುರ್ಬಲವಾಗಿದೆ. ನಿನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಅವರ ಮೇಲೆ ಕ್ರಮ ತೆಗೆದುಕೊಳ್ಳುವ ನಿರ್ಧಾರ ಸಾಧ್ಯವಾಗಿಲ್ಲ ಎಂದರು.
ಯತ್ನಾಳ್ ಅವರಿಗೂ ಕಾಂಗ್ರೆಸ್ಸಿಗೂ ಸಂಬಂಧವಿಲ್ಲ. ಆದರೆ ಬಿಜೆಪಿಯವರು ತಮ್ಮ ಸಮಾಧಾನಕ್ಕೆ ಅವರನ್ನು ಕಾಂಗ್ರೆಸ್ ಏಜೆಂಟ್ ಎಂದು ಬಿಂಬಿಸುವ ಯತ್ನ ಮಾಡುತ್ತಿದ್ದಾರೆ. ಬಹುಶಃ ಬಿಜೆಪಿ ಸರ್ಕಾರದ ಅವಧಿಯ ಅವ್ಯವಹಾರಗಳ ಬಗ್ಗೆ ಯತ್ನಾಳ್ ಅವರ ಹತ್ತಿರ ಮಾಹಿತಿ ಇರುವುದರಿಂದಲೇ ಅವರು ಹಿಂದೇಟು ಹಾಕುತ್ತಿರಬಹುದು ಎಂದರು.
ಬಿಜೆಪಿ ಸರ್ಕಾರವಿದ್ದಾಗ ಕೊರೋನಾ ಸಂದರ್ಭದಲ್ಲಿ ನಡೆದ ಖರೀದಿ ಮತ್ತಿತರ ವ್ಯವಹಾರಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ತನಿಖೆ ನಡೆಸಿ ವಾಸ್ತವವನ್ನು ಜನರ ಮುಂದಿಡುವ ಕೆಲಸ ಮಾಡುತ್ತದೆ. ಯಾರಿಂದಲಾದರೂ ತಪ್ಪಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.




