ಮಂಡ್ಯ: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಹಿಂದಿ ಹೇರಿಕೆಯ ಮೂಲಕ ಕನ್ನಡ ಹಾಗೂ ಇತರ ದೇಶೀಯ ಭಾಷೆಗಳನ್ನು ದಮನಿಸುವ ಪ್ರಯತ್ನಗಳಾಗುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮೇಳನ ಉದ್ಘಾಟನಾ ಸಮಾರಂಭದಲ್ಲಿಮಾತನಾಡಿದ ಅವರು, ಹೇರಲಾಗುತ್ತಿರುವ ಇದನ್ನು (ಹಿಂದಿ ಹೇರಿಕೆಯನ್ನು) ಪ್ರತಿಭಟಿಸದೇ ಇದ್ದರೆ ನಮ್ಮ ಭಾಷೆಗಳು ಗಂಡಾಂತರಕ್ಕೆ ಸಿಲುಕಲಿವೆ ಎಂದು ಎಚ್ಚರಿಸಿದರು.
ಕನ್ನಡಕ್ಕೆ ಒದಗಿರುವ ಕಂಟಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಸಾಕಷ್ಟು ಅನ್ಯಾಯವಾಗಿದೆ. ಶ್ರೀಮಂತರ ಕಾರ್ಪೊರೇಟ್ ಕಂಪನಿಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿದ್ದರಿಂದ ಜನರ ಕೈಯಲ್ಲಿ ಹಣ ಇಲ್ಲದೆ ಕೊಳ್ಳುವ ಶಕ್ತಿ ಕಡಿಮೆಯಾಗಿದೆ. ಇದಕ್ಕಾಗಿ ನಮ್ಮ ಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತರಬೇಕಾಯಿತು ಎಂದರು.
ಸಂವಿಧಾನದ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಯುತ್ತಿದೆ. ಅದರ ವಿರುದ್ಧ ಹೋರಾಡಬೇಕಾಗಿರುವುದು ನಮೆಲ್ಲರ ಜವಾಬ್ದಾರಿ. ಮಂಡ್ಯ ನೆಲದಲ್ಲಿ ಕೆಲವು ದ್ವೇಷವಾದಿ, ಹಿಂಸಾವಾದಿ ಶಕ್ತಿಗಳು ಜನರ ಮನಸ್ಸಿನಲ್ಲಿ ವಿಷ ಬಿತ್ತಲು ಪ್ರಯತ್ನಿಸುತ್ತಿವೆ. ಸಿಹಿ ಬೆಳೆಯುವ ಜನ ಅವರನ್ನು ಒಳಗೆ ಬಿಟ್ಟುಕೊಂಡಿಲ್ಲ. ಇದಕ್ಕಾಗಿ ಅಭಿನಂದನೆಗಳು ಎಂದರು.
ಸಮ್ಮೇಳನ ನಾಡಿನ ಸಮಸ್ಯೆಗಳಿಗೆ ಉತ್ತರ ಹುಡುಕಬೇಕು. ನಾಡಿನ ಬೌದ್ಧಿಕ ದಾಸ್ಯಕ್ಕೆ ಕಾರಣಗಳೇನು? ಅದನ್ನು ಮೀರುವ ಬಗೆ ಹೇಗೆ? ಎಂಬುದನ್ನು ಕುವೆಂಪು ವಿವರಿಸಿದ್ದಾರೆ. ಸಾವಿರಾರು ವರ್ಷಗಳಿಂದ ಪುರೋಹಿತಶಾಹಿ ನಮ್ಮನ್ನು ದಾಸ್ಯದಲ್ಲಿ ಹೇಗೆ ಮುಳುಗಿಸಿದೆ ಎಂಬ ಸಮಗ್ರ ಮಾಹಿತಿಯನ್ನು ಅವರು ನೀಡಿದ್ದಾರೆ ಎಂದರು.
ಆಧುನಿಕತೆಯ ಕಾಲದಲ್ಲೂ ನಾವು ವೈಚಾರಿಕತೆ ಹಾಗೂ ವೈಜ್ಞಾನಿಕತೆಯನ್ನು ಮೈಗೂಡಿಸಿಕೊಂಡಿಲ್ಲ. ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರಂಗಗಳನ್ನು ವೈಚಾರಿಕ ದೃಷ್ಟಿಯಿಂದ ನೋಡದೇ ಇದ್ದರೆ ಕೇಡು ತಪ್ಪುವುದಿಲ್ಲ. ಯಾವ ಸಂಪ್ರದಾಯವೂ ಸಂಕೋಚಕ್ಕೆ ಸಿಲುಕಬಾರದು. ಸರ್ವಧರ್ಮಗಳ ಸಾರ, ಉದಾರ ದರ್ಶನವನ್ನು ಕಂಡು ಬಾಳನ್ನು ಕಟ್ಟಿಕೊಳ್ಳಬೇಕು. ಜಾತಿ, ಮತ, ದೇಶ, ಕಾಲಗಳ ಭೇದವಿಲ್ಲದೆ ಎಲ್ಲಾ ಮಹಾಪುರುಷರ ಜ್ಞಾನಗಂಗೆಗಳನ್ನು ಸಂಪೂರ್ಣವಾಗಿ ಅನುಭವಿಸಬೇಕು ಎಂದರು.
ಇಂಗ್ಲಿಷ್ ಸೇರಿದಂತೆ ಪ್ರಮುಖ ಭಾಷೆಗಳ ಕೃತಿಗಳು ಡಿಜಿಟಲೀಕರಣದಿಂದ ಜಗತ್ತಿನ ಎಲ್ಲೆಡೆ ಎಲ್ಲರಿಗೂ ಮುಕ್ತವಾಗಿ ದೊರೆಯುತ್ತದೆ. ಕನ್ನಡದ ಸಮಗ್ರ ಸಾರಸ್ವತ ಲೋಕದ ಡಿಜಿಟಲೀಕರಣ ಕಾರ್ಯವನ್ನು ಆರಂಭಿಸಲಾಗಿದೆ. ಜಗತ್ತಿನಲ್ಲಿರುವ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಜ್ಞಾನವನ್ನು ವೃದ್ಧಿಸುವ ಕೆಲಸವಾಗಬೇಕು ಎಂದರು.
ಮೈಸೂರಿನ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿ ಕನ್ನಡ ಸಮಗ್ರ ನಾಗರಿಕತೆಯ ವಿಕಾಸ, ಸಂಸ್ಕೃತಿಯ ಇತಿಹಾಸಗಳನ್ನು ಬಿಂಬಿಸುವ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದರು.
ಸಂಕಷ್ಟದ ಭಾಷೆಗಳಲ್ಲಿ ಕನ್ನಡವೂ ಒಂದು ಎಂದು ಹೇಳಲಾಗುತ್ತಿದೆ. ಇದಕ್ಕೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲ ಸಮಸ್ಯೆಗಳಿವೆ. ಮಕ್ಕಳಿಗೆ ಹೆಡ್, ಹಾರ್ಟ್ ಮತ್ತು ಹ್ಯಾಂಡ್ ಎಂಬ 3-ಎಚ್ ಸೂತ್ರವನ್ನು ಅಳವಡಿಸಬೇಕು. ಮೆದುಳು, ಕರುಣೆ, ಕೌಶಲ್ಯ ಒಳಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು ಎಂದು ಕರೆ ನೀಡಿದರು.



