ಟಿಕೆಟ್ ಫೈನಲ್: ದೆಹಲಿಯತ್ತ ರಾಜ್ಯ ನಾಯಕರು

3 years ago

#Ticket #final #BJP #heads #state #Delhi #election

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲುವಿನ ಮಾನದಂಡ ಆಧರಿಸಿ ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ ನಡೆದ ಕೋರ್ ಕಮಿಟಿ ಸತತ ಸಮಾಲೋಚನೆ ಬಳಿಕ ಸಿದ್ಧಪಡಿಸಿರುವ ಸಂಭಾವ್ಯರ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಗೆ ರವಾನಿಸಿದೆ. ಕೇಂದ್ರ ಚುನಾವಣಾ ಸಮಿತಿ ಶುಕ್ರವಾರ ರಾತ್ರಿ ಮತ್ತು ಶನಿವಾರ ಸಭೆ ನಡೆಸಲಿದ್ದು ಆನಂತರ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಈ ಸಭೆಯಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ನವದೆಹಲಿಗೆ ತೆರಳಲಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿಗಳಾದ ಅಣ್ಣಾಮಲೈ, ಮನ್ಸುಖ್ ಮಾಂಡವೀಯ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪಕ್ಷದ ನೀತಿ ನಿರೂಪಣೆಗಳು ಹಾಗೂ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುವ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಪಟ್ಟಿ ಬಿಡುಗಡೆಯಾಗುವ ಸಂಭವವಿದೆ.

ಸಭೆಯಲ್ಲಿ ಪ್ರಮುಖವಾಗಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಕಳುಹಿಸಿರುವ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಯಲಿದ್ದು, ಮೊದಲ ಹಂತದಲ್ಲಿ 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಂಸದೀಯ ಮಂಡಳಿ ಒಪ್ಪಿಗೆ ಸೂಚಿಸಲಿದೆ ಎನ್ನಲಾಗುತ್ತಿದೆ.

Leave a Reply