ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಸಮಾರಂಭವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರಿಸಿದ ವಿಚಾರ ಇದೀಗ ಕಾಂಗ್ರೆಸ್ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ.
ಲೋಕೋಪಯೋಗಿ ಸಚಿವ ಹಾಗೂ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಈ ಕುರಿತು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಇದಕ್ಕೆ ಸ್ಪಷ್ಟನೆ ನೀಡಿದ್ದು, ಈ ವಿಷಯದಲ್ಲಿ ಯಾವ ರಾಜಕೀಯವೂ ಇಲ್ಲ. ರಾಹುಲ್ ಗಾಂಧಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಲವು ಬದಲಾವಣೆಗಳಾದವು. ಇದೀಗ ಬೆಳಗಾವಿಯಲ್ಲಿ ಇನ್ನೊಂದು ಕಾರ್ಯಕ್ರಮ ಆಯೋಜಿಸಲು ಯೋಜಿಸುತ್ತಿದ್ದೇವೆ ಎಂದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲರ ಒಮ್ಮತದ ತೀರ್ಮಾನದಂತೆ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ. ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆ ಕಾರ್ಯಕ್ರಮಕ್ಕೆ ಯೋಜಿಸಿದ್ದೆವು. ಆದರೆ, ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇವೆ. ಹೀಗಾಗಿ ಗೃಹಲಕ್ಷ್ಮಿ ಯೋಜನೆ ಇಲ್ಲಿಂದ ಆರಂಭಿಸುತ್ತಿದ್ದೇವೆ ಎಂದರು.
ಕಾರ್ಯಕ್ರಮ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಗೊಂದಲವಿಲ್ಲ. ಅಲ್ಲಿಯೂ ಒಂದು ಕಾರ್ಯಕ್ರಮ ಆಯೋಜಿಸಲಾಗುವುದು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಲ್ಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ಹೇಳಿದರು.
ಆಗಸ್ಟ್ 30ರಂದು ಯೋಜನೆಗೆ ಚಾಲನೆ ನೀಡುತ್ತಿದ್ದಂತೆಯೇ ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅವರವರ ಮೊಬೈಲ್ ಸಂಖ್ಯೆಗೆ ಸಂದೇಶ ಬರುತ್ತದೆ. ಇದಕ್ಕೆ ಹಣದ ಕೊರತೆ ಇಲ್ಲ. ಈಗಾಗಲೇ ಬ್ಯಾಂಕ್‌ಗಳಲ್ಲಿ ಠೇವಣಿ ಮಾಡಲಾಗಿದೆ. ಸರ್ವರ್ ಸಮಸ್ಯೆಯಾದರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದಷ್ಟೆ ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಈಗ ಅವರದ್ದೇ ಮಧ್ಯಪ್ರದೇಶ ಸರ್ಕಾರ ನಮ್ಮ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಇದಕ್ಕೆ ಪ್ರಧಾನಿ ಏನು ಹೇಳುತ್ತಾರೆ? ನಮ್ಮ ಕಾರ್ಯಕ್ರಮಗಳು ದೇಶದೆಲ್ಲೆಡೆ ಸದ್ದು ಮಾಡುತ್ತಿವೆ ಎಂದರು.



