
ತಮಿಳುನಾಡಿನಲ್ಲಿ ಹೊಸ ರಾಜಕೀಯ ಅಧ್ಯಾಯ ಆರಂಭವಾಗಿದ್ದು, ನಟ ಹಾಗೂ ತಮಿಳಗ ವೆತ್ರಿ ಕಳಗಂ (TVK) ಪಕ್ಷದ ನಾಯಕ ಸಿ.ಜೋಸೆಫ್ ವಿಜಯ ಇಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಚೆನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಪದಗ್ರಹಣ ಬೋಧಿಸಿದರು.
ತಮಿಳುನಾಡಿನ ರಾಜಕೀಯದಲ್ಲಿ ದಶಕಗಳ ಕಾಲ ಪ್ರಭಾವ ಬೀರಿದ್ದ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ಪ್ರಾಬಲ್ಯಕ್ಕೆ ತೆರೆ ಬಿದ್ದಂತಾಗಿದ್ದು, ವಿಜಯ್ ನೇತೃತ್ವದ TVK ಪಕ್ಷ ಹೊಸ ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿದೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ TVK ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ಯಶಸ್ವಿಯಾಯಿತು.
ಪ್ರಮಾಣವಚನ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ ಗಾಂಧೀ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಪ್ರಾದೇಶಿಕ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್ ಪಕ್ಷವು ವಿಜಯ್ ಸರ್ಕಾರಕ್ಕೆ ಬೆಂಬಲ ನೀಡಿರುವುದಾಗಿ ತಿಳಿದುಬಂದಿದೆ.

ಚಿತ್ರರಂಗದ ಸೂಪರ್‌ಸ್ಟಾರ್ ಆಗಿದ್ದ ವಿಜಯ್ ಅವರು ಜನಸಾಮಾನ್ಯರ ಸಮಸ್ಯೆಗಳ ಕುರಿತು ನಡೆಸಿದ ಅಭಿಯಾನ, ಯುವಕರಲ್ಲಿ ಮೂಡಿಸಿದ ನಂಬಿಕೆ ಹಾಗೂ ಬದಲಾವಣೆಯ ಘೋಷಣೆಗಳಿಂದ ಜನಮನ್ನಣೆ ಗಳಿಸಿ, ಈಗ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ತಮಿಳುನಾಡಿನ ರಾಜಕೀಯದಲ್ಲಿ ಇದು ಐತಿಹಾಸಿಕ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ.

