ಬೆಂಗಳೂರು: ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ಹೀಗಾಗಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕ ಮನೋಭಾವ ಬೆಳಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
ರಾಜ್ಯ ಸರ್ಕಾರದ ವ್ಯಾಪ್ತಿಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವೈಜ್ಞಾನಿಕತೆ ಮತ್ತು ವೈಚಾರಿಕತೆ ಇಲ್ಲದೆ ತಲೆ ತುಂಬ ಕೇವಲ ಮೌಢ್ಯವನ್ನೇ ತುಂಬಿಕೊಂಡ ಪದವೀಧರರು ವಿಶ್ವವಿದ್ಯಾಲಯಗಳಿಂದ ಹೊರಗೆ ಬಂದರೆ ದೇಶಕ್ಕೆ, ನಾಡಿಗೆ ಮತ್ತು ಈ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ. ಕುಲಪತಿಗಳು ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿದ್ದಾಗ ಮಾತ್ರ ದೇಶದಲ್ಲಿ ಸಮಾನತೆ ಸಾಧ್ಯ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಈ ಸಮ ಸಮಾಜ ನಿರ್ಮಾಣ ಮಾಡುವ ಸಾಮರ್ಥ್ಯವನ್ನು ನಾವು ವಿವಿಗಳ ಮೂಲಕ ಕೊಡಬೇಕು ಎಂದರು.
ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ, ಆರ್ಥಿಕವಾಗಿ ಮತ್ತು ನಾಗರಿಕವಾಗಿ ಮುನ್ನಡೆಸುವ ಪದವೀಧರರನ್ನು ವಿಶ್ವವಿದ್ಯಾಲಯಗಳು ಸಜ್ಜುಗೊಳಿಸಬೇಕು. ಅದನ್ನು ಬಿಟ್ಟು ಕೇವಲ ಮೌಢ್ಯಗಳನ್ನು ತುಂಬಿಕೊಂಡು ಹೊರಗೆ ಬಂದರೆ ಅದರಿಂದ ದೇಶಕ್ಕೂ ಉಪಯೋಗವಿಲ್ಲ. ನಾಡಿಗೂ ಪ್ರಯೋಜನವಿಲ್ಲ. ಪದವೀಧರರ ಭವಿಷ್ಯಕ್ಕೂ ಉಪಯೋಗವಿಲ್ಲ ಎಂದು ಹೇಳಿದರು.
ಸಂವಿಧಾನಕ್ಕೆ ವಿರುದ್ಧವಾದ ಚಟುವಟಿಕೆ ಮತ್ತು ಕ್ರಮಗಳು ವಿವಿಗಳಲ್ಲಿ ನಡೆಯಬಾರದು. ವಿವಿಗಳಿಂದ ಬಂದವರು ಮತ್ತೆ ಮೌಢ್ಯಗಳು, ಜಾತಿಯ ಜೊತೆಯಲ್ಲಿದ್ದರೆ ಅವರು ಪಡೆದಿರುವುದು ಶಿಕ್ಷಣ ಎಂದು ಕರೆಯಲಾಗದು. ವಿವಿಗಳಲ್ಲಿ ಧರ್ಮ ನಿರಪೇಕ್ಷತೆ, ಮೌಢ್ಯ ರಹಿತ, ಕಂದಾಚಾರ ರಹಿತ ಹಾಗೂ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು ಎಂದು ಸೂಚಿಸಿದರು.
ಕೆಲವೊಮ್ಮೆ ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಕರ್ತೃಗಳು, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ನಡೆಸಿರುವುದನ್ನು ಕೆಲವು ವಿವಿಗಳಲ್ಲಿ ನೋಡಿದ್ದೇನೆ. ಜಾತ್ಯತೀತ ವಿರೋಧಿ ಮನೋಭಾವವನ್ನು ಪುರಸ್ಕರಿಸಬಾರದು. ಹಾಗೆ ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತದೆ. ಯಾವುದೇ ಕಾರಣಕ್ಕೆ ಅಂತಹ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಇಲ್ಲವಾದರೆ ಉನ್ನತ ಶಿಕ್ಷಣ ಸರಿದಾರಿಯಲ್ಲಿ ಸಾಗದೆ ಹೋದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ತಿಳಿಸಿದರು.
ಅತಿಥಿ ಉಪನ್ಯಾಸಕರ ನೇಮಕದ ಸಂದರ್ಭದಲ್ಲಿ ಇಂತಹ ವ್ಯಕ್ತಿಗಳನ್ನು ನೇಮಕ ಮಾಡಕೂಡದು. ವಿವಿಯ ವಿದ್ಯಾರ್ಥಿಗಳು ಮನುಷ್ಯತ್ವ ಇರುವ ವ್ಯಕ್ತಿಗಳಾಗಿ ಬೆಳೆಯಬೇಕು. ಹುಟ್ಟುವಾಗ ಎಲ್ಲರೂ ವಿಶ್ವಮಾನವರು, ಬೆಳೆಯುತ್ತಾ ಬೆಳೆಯುತ್ತಾ ಅಲ್ಪಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದಂತೆ ಆಗಬಾರದು ಎಂದರು.
ಸಾಕಷ್ಟು ಕೊರತೆಗಳನ್ನು ಇಟ್ಟುಕೊಂಡು ಜಿಲ್ಲೆಗೊಂದು ವಿವಿ ಮಾಡುವ ತೀರ್ಮಾನ ಸರಿಯಲ್ಲ. ಮೂಲಸೌಲಭ್ಯ ಒದಗಿಸಲಾಗದಿದ್ದರೆ ಪ್ರಯೋಜನವಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಶೇ. 3 ಕ್ಕಿಂತ ಹೆಚ್ಚು ಅನುದಾನ ಒದಗಿಸಲಾಗಿತ್ತು. ಮುಂದಿನ ವರ್ಷದಿಂದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಯಾವುದೇ ಲೋಪವಾಗಬಾರದು. ಒಂದೇ ಬಾರಿ ಎಲ್ಲ ಪರಿಹಾರ ಒದಗಿಸಲಾಗದು. ಆದರೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.
ರಾಜ್ಯದ 32 ಸಾರ್ವಜನಿಕ ವಿವಿಗಳಲ್ಲಿ 1.31 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಶಿಕ್ಷಣ ಸೂಚ್ಯಂಕದ ಪ್ರಮಾಣ ಸರ್ಕಾರಿ ಕಾಲೇಜುಗಳಲ್ಲಿ ಎಷ್ಟು, ಖಾಸಗಿ ಕಾಲೇಜುಗಳಲ್ಲಿ ಎಷ್ಟು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರದ್ದು ಎಷ್ಟು ಎಂದು ಮಾಹಿತಿ ಇಟ್ಟುಕೊಂಡಿರಬೇಕು ಎಂದು ಹೇಳಿದರು.
ಸಮಗ್ರ ಶಿಕ್ಷಣ ಸೂಚ್ಯಂಕ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಾದ ಚಾಮರಾಜನಗರ, ಯಾದಗಿರಿ, ಹಾಸನ, ಕೊಪ್ಪಳ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಿಸಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಮತ್ತು ಸಂಶೋಧನೆಗಳನ್ನು ಹೆಚ್ಚಿಸುವಂತೆ ಸೂಚಿಸಿದರು.
ರಾಜ್ಯದ ಅತ್ಯಂತ ಹಳೆಯ ಮತ್ತು ಮೊದಲ ವಿವಿ ಆಗಿರುವ ಮೈಸೂರು ವಿವಿಯ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸೂಚನೆ ನೀಡಿದರು.



