ಬಿಜೆಪಿಯಿಂದ ಮೊಸಳೆ ಕಣ್ಣೀರು ಸುರಿಸುತ್ತಾ ಅನಗತ್ಯ ರಾಜಕಾರಣ: ಸಿದ್ದರಾಮಯ್ಯ

2 years ago

ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ ಮಹಿಳೆಯ ವಿವಸ್ತ್ರ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಾ ಅನಗತ್ಯ ರಾಜಕಾರಣ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಅವರು, ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ತಕ್ಷಣವೇ, ಸಂತ್ರಸ್ತ್ರೆಯ ಮನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭೇಟಿ ನೀಡಿ ಸ್ವಾಂತನ ಹೇಳಿದ್ದಾರೆ. ಸಂತ್ರಸ್ತೆಯ ಮನೆಗೆ ಭೇಟಿ ಕೊಟ್ಟು ಸಾಂತ್ವನ ನೀಡಿದ್ದು ಮಾತ್ರವಲ್ಲ ಪರಿಹಾರವನ್ನೂ ನೀಡಿದ್ದಾರೆ ಎಂದಿದ್ದಾರೆ.

ಬಿಜೆಪಿ ನಾಯಕರು ವಾಸ್ತವವನ್ನು ಮರೆಮಾಚಿ ರಾಜಕಾರಣದಲ್ಲಿ ತೊಡಗಿದ್ದಾರೆ. ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲೇ ಇದ್ದ ಬಿಜೆಪಿ ನಾಯಕರು ಸಂತ್ರಸ್ಥೆಯನ್ನು ಭೇಟಿ ಮಾಡಿ ಸಾಂತ್ವನ ಹೇಳಲಿಲ್ಲ. ಅಧಿವೇಶನ ಮುಗಿದ ನಂತರ ಅಲ್ಲಿಗೆ ಭೇಟಿ ನೀಡುವ ನಾಟಕ ಆಡುತ್ತಿದ್ದಾರೆ ಎಂದಿದ್ದಾರೆ.

ಪ್ರಕರಣದ ತನಿಖೆಯ ಮೇಲೆ ನಾನೇ ಖುದ್ದಾಗಿ ನಿಗಾ ಇಟ್ಟಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡುವ ಮೂಲಕ ಇಂತಹ ಅಮಾನುಷ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರ ಕೈಗೊಂಡ ಕ್ರಮದಿಂದ ರಾಜ್ಯ ಬಿಜೆಪಿ ನಾಯಕರಿಗೂ ಸಮಾಧಾನವಾಗಿದೆ, ಆದರೂ, ಘಟನೆ ನಡೆದು ನಾಲ್ಕು ದಿನಗಳ ನಂತರ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರು, ಸತ್ಯ ಶೋಧನಾ ಸಮಿತಿ ಕಳುಹಿಸುವ ಮೂಲಕ ಪ್ರಕರಣವನ್ನು ಕೆದಕಲು ಹೊರಟಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಮಹಿಳೆಯರ ಮೇಲಿನ ಕಾಳಜಿಯಿಂದ ಖಂಡಿತ ಅಲ್ಲ ಎಂದು ಹೇಳಿದ್ದಾರೆ.

Leave a Reply