ವಿಧಾನ ಪರಿಷತ್ ಚುನಾವಣೆ: ಅಂತಿಮವಾಗದ ಕಾಂಗ್ರೆಸ್ ಪಟ್ಟಿ

2 years ago

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗೆ ಭರ್ಜರಿ ರಂಗು ಬಂದಿದೆ. ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯೆಯ ಬಲದ ಆಧಾರದಲ್ಲಿ ಕಾಂಗ್ರೆಸ್ ಏಳು ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದ್ದು, ಇದಕ್ಕಾಗಿ ಮಾಜಿ ಮಂತ್ರಿಗಳು, ಮಾಜಿ ಸಂಸದರು ಮತ್ತು ಪಕ್ಷದ ವಿವಿಧ ಹಂತದ ನಾಯಕರು ತೀವ್ರ ಪೈಪೋಟಿಯಲ್ಲಿ ನಿರತರಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಸಣ್ಣ ನೀರಾವರಿ ಸಚಿವ ಬೋಸರಾಜು ಅವರಿಗೆ ಈಗಾಗಲೇ ಅವಕಾಶ ಖಾತ್ರಿಯಾಗಿದೆ. ಉಳಿದ ಐದು ಸ್ಥಾನಗಳ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ.

ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಸಂಭಾವ್ಯರ ಪಟ್ಟಿ ಸಲ್ಲಿಸಿದ್ದಾರೆ.

ಇಂದು ತಡರಾತ್ರಿ ಒಳಗೆ ಮಲ್ಲಿಕಾರ್ಜುನ ಖರ್ಗೆ ಅವರು ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ ಪಟ್ಟಿ ಘೋಷಿಸುವ ಸಾಧ್ಯತೆ ಇದೆ. ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದ್ದು, ಭಾನುವಾರ ಸಂಜೆ ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯಿಂದ ಸುಮಲತಾ ಗೆ ಅವಕಾಶ: ಈ ನಡುವೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗಾಗಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಸಂಸದೆ ಸುಮಲತಾ ಅವರನ್ನು ವಿಧಾನ ಪರಿಷತ್ ಚುನಾವಣೆಯ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.

ಇವರೊಂದಿಗೆ ಸಂಘ ಪರಿವಾರದ ಹಿರಿಯ ನಾಯಕ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಪ್ರೊ.ನಾಗರಾಜ್, ವಿಧಾನ ಪರಿಷತ್ ಹಾಲಿ ಸದಸ್ಯ ರವಿಕುಮಾರ್ ಅವರನ್ನು ಬಿಜೆಪಿ ಕಣಕ್ಕಿಳಿಸಲಿದೆ. ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಗೆ ಮೂರು ಸ್ಥಾನ ಲಭಿಸಲಿದೆ.

ಇನ್ನು ಮತ್ತೊಂದು ವಿಪಕ್ಷ ಜೆಡಿಎಸ್ ಗೆ ಒಂದು ಸ್ಥಾನ ಲಭಿಸಲಿದ್ದು, ಜೆಡಿಎಸ್‌‍ ಅಭ್ಯರ್ಥಿಯಾಗಿ ಯಶವಂತಪುರ ಕ್ಷೇತ್ರದ ಪಕ್ಷದ ಮುಖಂಡ ಟಿ.ಎನ್‌.ಜವರಾಯಿಗೌಡ ಅಥವಾ ಹಾಲಿ ಸದಸ್ಯ ಬಿಎಂ ಫಾರೂಕ್ ಅವರು ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.

ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ನಾಯಕರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ. ಅಭ್ಯರ್ಥಿಯ ನಾಮಪತ್ರಕ್ಕೆ ಸೂಚಕರಾಗಿ ಶಾಸಕರು ಸಹಿ ಹಾಕಬೇಕಾಗಿರುವುದರಿಂದ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಈ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾಗದೇ ಮತದಾನ ನಡೆಯುವುದು ಖಾತರಿಯಾದರೆ, ಕೈಗೊಳ್ಳಬೇಕಾದ ಚುನಾವಣಾ ತಂತ್ರಗಾರಿಕೆ, ಮೇಲ್ಮನೆ ಹಾಗೂ ಲೋಕಸಭಾ ಚುನಾವಣೆ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ ಎಂದು ಜೆಡಿಎಸ್‌ ಮುಖಂಡರು ಹೇಳಿದರು.

Leave a Reply