ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ಹಾಗೂ ಮಂತ್ರಿಮಂಡಲ ಪುನಾರಚನೆ ಕುರಿತಾಗಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ಹೈಕಮಾಂಡ್ ಮಧ್ಯ ಪ್ರವೇಶಿಸಿದ್ದು, ಲೋಕಸಭೆಯ ಚಳಿಗಾಲದ ಅಧಿವೇಶನ ಮುಗಿಯುವವರೆಗೆ ಈ ಬಗ್ಗೆ ಯಾವುದೇ ಚರ್ಚೆ ನಡೆಸದಂತೆ ತಾಕೀತು ಮಾಡಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ದೆಹಲಿಯಿಂದ ಬೆಂಗಳೂರಿಗೆ ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವರು ಮತ್ತು ಶಾಸಕರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ತಮ್ಮನ್ನು ಭೇಟಿಯಾದ ಎಲ್ಲ ನಾಯಕರಿಗೂ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅರಿವಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಲೋಕಸಭೆಯ ಚಳಿಗಾಲದ ಅಧಿವೇಶನ ಮುಗಿದ ನಂತರ ಎಲ್ಲರೊಂದಿಗೆ ಚರ್ಚೆ ನಡೆಸಿ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿರುವುದಾಗಿ ತಿಳಿದು ಬಂದಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಕೃಷಿ ಸಚಿವ ಚಲುವರಾಯಸ್ವಾಮಿ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ಸಚಿವರು ಮತ್ತು ಶಾಸಕರು ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯದ ವಿದ್ಯಮಾನಗಳ ಬಗ್ಗೆ ಸಮಲೋಚನೆ ನಡೆಸಿದರು.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ಜೇವಾಲ ಅವರು ತಮಗೆ ಎಲ್ಲ ಮಾಹಿತಿ ನೀಡಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೂ ವಿದ್ಯಮಾನಗಳ ಅರಿವಿದೆ. ಈ ಎಲ್ಲರೂ ತಮಗೆ ವಿವರ ನೀಡಿದ್ದು, ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿ ಬಿಕ್ಕಟ್ಟು ಬಗೆಹರಿಸಲು ಸೂಚಿಸಿದ್ದಾರೆ. ತಾವು ಈ ವಿಚಾರವಾಗಿ ಲೋಕಸಭೆಯ ಅಧಿವೇಶನ ಮುಗಿದ ಬಳಿಕ ಮಾತನಾಡುತ್ತೇನೆ ಎಂದು ಎಲ್ಲರಿಗೂ ತಿಳಿಸಿರುವುದಾಗಿ ಗೊತ್ತಾಗಿದೆ.
ಶಾಸಕರು ಆನಗತ್ಯವಾಗಿ ದೆಹಲಿ ಯಾತ್ರೆ ಕೈಗೊಳ್ಳುವ ಮೂಲಕ ಗೊಂದಲ ಮೂಡಿಸಬಾರದು. ಇನ್ನು ಕೆಲವು ಶಾಸಕರು, ಸಚಿವರು ಭೋಜನಕೂಟ ಏರ್ಪಡಿಸುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ. ಇವುಗಳಿಗೆ ತಕ್ಷಣವೇ ಇತಿಶ್ರೀ ಹಾಡಬೇಕು ಎಂದು ಸಿಎಂ ಹಾಗೂ ಡಿಸಿಎಂ ಸೂಚನೆ ನೀಡಲಾಗಿದೆ. ಎಲ್ಲರೂ ಕೂಡಾ ಹೈಕಮಾಂಡ್ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಖರ್ಗೆ ನಾಯಕರಿಗೆ ಸೂಚಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಹಲವು ನಾಯಕರಲ್ಲಿ ಅನೇಕರು ತಮ್ಮನ್ನು ಸಚಿವ ಸ್ಥಾನಕ್ಕೆ ಪರಿಗಣಿಸುವಂತೆ ಮನವಿ ಮಾಡಿದರೆ, ಮತ್ತೆ ಕೆಲವರು ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಮತ್ತೆ ಕೆಲವರು ಸದ್ಯದ ಪರಿಸ್ಥಿತಿಯಲ್ಲಿ ನಾಯಕತ್ವ ಬದಲಾವಣೆ ಮಾಡಬಾರದು. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲು ಸೂಚಿಸಬೇಕು ಎಂದು ಕೋರಿರುವುದಾಗಿ ಗೊತ್ತಾಗಿದೆ. ಈ ಎಲ್ಲ ವಿಚಾರಗಳ ಬಗ್ಗೆ ಶಾಸಕರು ಮತ್ತು ಮಂತ್ರಿಗಳ ಅಹಮಲು ಕೇಳಿರುವ ಖರ್ಗೆ ಅವರು, ಸದ್ಯಕ್ಕೆ ಯಾವುದೇ ವಿಚಾರದ ಬಗ್ಗೆಯೂ ತಾವು ಪ್ರತಿಕ್ರಿಯೆ ನೀಡುವುದಿಲ್ಲ. ಲೋಕಸಭೆಯ ಅಧಿವೇಶನದ ಸಮಯದಲ್ಲಿ ರಾಹುಲ್ ಗಾಂಧಿ ವೇಣುಗೋಪಾಲ್, ಸುರ್ಜೇವಾಲಾ ಮತ್ತು ಇತರೆ ನಾಯಕರ ಜೊತೆಗೆ ಮಾತುಕತೆ ನಡೆಸಿ ಒಂದು ತೀರ್ಮಾನ ಕೈಗೊಳ್ಳಲಾಗುತ್ತದೆ. ಅದನ್ನು ನಂತರ ರಾಜ್ಯನಾಯಕರ ಸಭೆ ಕರೆದು ವಿವರಿಸುತ್ತೇವೆ. ಅಲ್ಲಿವರೆಗೆ ಯಾರೂ ಕೂಡ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸಕ್ಕೆ ಕೈ ಹಾಕಬಾರದು ಎಂದು ಕಿವಿ ಮಾತು ಹೇಳಿರುವುದಾಗಿ ತಿಳಿದುಬಂದಿದೆ.
ಈ ನಡುವೆ ಉಭಯ ಬಣಗಳೂ ಚಟುವಟಿಕೆಯಲ್ಲಿ ನಿರತವಾಗಿವೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಆಪ್ತ ಸಚಿವರಾದ ಎಚ್ ಸಿ ಮಹಾದೇವಪ್ಪ, ಬೈರತಿ ಸುರೇಶ್, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್, ಸತೀಶ್ ಜಾರಕಿಹೊಳಿ, ಜಿ ಪರಮೇಶ್ವರ್ ಸೇರಿದಂತೆ ಹಲವು ಶಾಸಕರ ಜೊತೆ ಮಾತುಕತೆ ನಡೆಸಿದರು. ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್ ಸೇರಿದಂತೆ ಅನೇಕ ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂತ್ರಿಮಂಡಲ ಪುನರ್ ರಚನೆ ಸಮಯದಲ್ಲಿ ತಮಗೆ ಅವಕಾಶ ಕಲ್ಪಿಸಿ ಕೊಡುವಂತೆ ಮನವಿ ಮಾಡಿದರು.
ಮತ್ತೊಂದೆಡೆ ಡಿ ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕರು ದೆಹಲಿಯಿಂದ ಹಿಂತಿರುಗಿದ್ದು, ಶಿವಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ದೆಹಲಿ ಯಾತ್ರೆಯ ವಿವರವನ್ನು ನೀಡಿದರು.
ಈ ವೇಳೆ ಮಾತನಾಡಿದ ಶಾಸಕರಾದ ರವಿಕುಮಾರ್ ಗಣಿಗ, ನೆಲಮಂಗಲ ಶಾಸಕ ಶ್ರೀನಿವಾಸ್ ಸೇರಿದಂತೆ ಅನೇಕರು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರುವಲ್ಲಿ ಡಿ ಕೆ ಶಿವಕುಮಾರ್ ಅವರ ಶ್ರಮ ಪ್ರಮುಖವಾಗಿದೆ. ಹೀಗಾಗಿ ಅದಕ್ಕೆ ತಕ್ಕ ಪ್ರತಿಫಲ ಸಿಗಬೇಕು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿಯಾಗಬೇಕು ಎನ್ನುವುದು ನಮ್ಮ ಅಭಿಪ್ರಾಯವಾಗಿದೆ. ಆದರೆ ಅದು ಯಾವಾಗ ಎನ್ನುವುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ. ಹೈ ಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಎಲ್ಲರೂ ಬದ್ಧರಾಗಿದ್ದೇವೆ ಎಂದರು.




