ವಿದ್ಯುತ್ ಕಳ್ಳತನ ಕುರಿತು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

2 years ago

#HDKumaraswamy #electricity #theft

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ.

ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂಬ ಆರೋಪವನ್ನು ಕೆಪಿಸಿಸಿ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಬಿಡುಗಡೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್‌ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ @INCKarnataka ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ ಎಂದಿದ್ದಾರೆ.

ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದಿದ್ದಾರೆ.

Leave a Reply