ದೆಹಲಿ: ದೇಶದ ಭದ್ರತೆ ಮತ್ತು ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಬೇಕು. ಇದಕ್ಕಾಗಿ ತಾವು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿಗೆ ಮರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಕ್ಷಣದಿಂದಲೇ ಅಂಗೀಕರಿಸುವಂತೆ ಕೋರಿ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.
ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಕೆಲವೊಂದು ಕಾರಣಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದೆ. ಕಾಂಗ್ರೆಸ್ ಪಕ್ಷದಲ್ಲಿ ತಮಗೆ ಉತ್ತಮ ಗೌರವ ಮತ್ತು ಸ್ಥಾನಮಾನಗಳನ್ನು ನೀಡಿದ್ದರು. ಆದರೆ ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕೆಂಬ ಉದ್ದೇಶದಿಂದ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದರು.
ಸದ್ಯದ ಪರಿಸ್ಥಿತಿಯಲ್ಲಿ ದೇಶಕ್ಕೆ ಪ್ರಧಾನಿ ಮೋದಿ ಅವರಂತಹ ನಾಯಕತ್ವ ಅಗತ್ಯವಿದೆ. ದೇಶದ ಭದ್ರತೆ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಮುಖಂಡರು ಮತ್ತು ಹಿತೈಷಿಗಳ ಸಲಹೆ ಮೇರೆಗೆ ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದರು.
ಕಾಂಗ್ರೆಸ್ ಪಕ್ಷದಿಂದ ತಾವು ವಿಧಾನ ಪರಿಷತ್ ಸದಸ್ಯರಾಗಿ ನೇಮಕವಾಗಿದ್ದು ವಿಧಾನ ಪರಿಷತ್ ಸದಸ್ಯತ್ವ ಮತ್ತು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದರು.
ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದಾಗಿನಿಂದ ಮಾತೃ ಪಕ್ಷಕ್ಕೆ ಮರಳುವಂತೆ ಪಕ್ಷದ ಮುಖಂಡರು ಹಾಗೂ ಬೆಂಬಲಿಗರು ತಮ್ಮ ಮೇಲೆ ಒತ್ತಡ ಹೇರುತ್ತಿದ್ದರು. ಅದು ಕಳೆದ ಎಂಟು ತಿಂಗಳ ನಂತರದಲ್ಲೂ ತೀವ್ರವಾಗಿತ್ತು. ಅವರೆಲ್ಲರ ಆಶಯದಂತೆ ಮರಳಿ ಮಾತೃ ಪಕ್ಷ ಸೇರಿದ್ದೇನೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಎಂದರು.
ಮತ್ತೆ ಮಾತೃಪಕ್ಷವಾದ ಬಿಜೆಪಿಗೆ ಮರಳುತ್ತಿರುವುದು ನನಗೆ ಸಂತಸ ತಂದಿದೆ. ಯಾವುದೇ ಹುದ್ದೆಗಾಗಲೀ, ಲೋಕಸಭಾ ಚುನಾವಣೆಯ ಟಿಕೆಟ್‌ಗಾಗಲೀ ಬೇಡಿಕೆ ಇಟ್ಟಿಲ್ಲ. ಪಕ್ಷದ ವರಿಷ್ಠರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ತಾವು ಬದ್ಧ ಎಂದರು.
ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂಬುದು ನನ್ನ ಅಪೇಕ್ಷೆ. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್‌ನವರು ಕೂಡಾ ಒಳ್ಳೆಯ ಗೌರವ ಸ್ಥಾನಮಾನ ನೀಡಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ಜಗದೀಶ್ ಶೆಟ್ಟರ್ ಅವರನ್ನು ಬರಮಾಡಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಶೆಟ್ಟರ್ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ವಿಜಯೇಂದ್ರ ಅವರ ನಾಯಕತ್ವದಲ್ಲಿ ಕರ್ನಾಟಕದಿಂದ ಕನಿಷ್ಠ 25 ಬಿಜೆಪಿ ಸಂಸದರನ್ನು ಆಯ್ಕೆ ಮಾಡಿ ಕಳುಹಿಸಲಾಗುವುದು ಎಂದರು.
ನರೇಂದ್ರ ಮೋದಿ ಅವರ ನಾಯಕತ್ವ ದೇಶಕ್ಕೆ ಅತ್ಯಂತ ಜರೂರಾಗಿದೆ. ಅವರು ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಎಲ್ಲಾ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದರು.




