ಬೆಂಗಳೂರು: ಎಚ್.ಕಾಂತರಾಜು ವರದಿ ಜಾತಿ ಗಣತಿ ಅಲ್ಲವೇ ಅಲ್ಲ. ಇದು ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗತಿ ಸರಿಪಡಿಸುವ ಹಿನ್ನೆಲೆಯಲ್ಲಿ ತಯಾರಾದ ವರದಿ. ಇದಕ್ಕೆ ವಿರೋಧ ಯಾಕೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಪ್ರಶ್ನಿಸಿದರು.
ವೀರಶೈವ – ಲಿಂಗಾಯತ, ಒಕ್ಕಲಿಗ ಮತ್ತು ಬ್ರಾಹ್ಮಣ ಸಮುದಾಯದಿಂದ ಜಾತಿಗಣತಿ ವರದಿ ಕುರಿತು ಅಪಸ್ವರ ಎದ್ದಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಶಿವರಾಜ ತಂಗಡಗಿ, ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ. ಈ ವರದಿಯನ್ನು ಜಾತಿ ಗಣತಿ ವರದಿ ಎಂದು ಕರೆಯುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
ಈ ವರದಿಯಿಂದ ಪ್ರತಿಯೊಂದು ಸಮಾಜದ ಜನಸಂಖ್ಯೆ, ಶಿಕ್ಷಣ, ಸಾಮಾಜಿಕ ಹಾಗೂ ಆರ್ಥಿಕವಾಗಿ ಸಮಾಜದ ಅಂಕಿ–ಅಂಶವನ್ನು ಸ್ಪಷ್ಟವಾಗಿ ತಿಳಿಯಬಹುದು. ಈ ವರದಿಗೆ ಕೆಲವು ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆಯೇ ಆಗಿಲ್ಲ. ವರದಿ ಸ್ವೀಕಾರ ಮಾಡಿದರೆ ಅದನ್ನು ಪಡೆದು ಅಧ್ಯಯನ ಮಾಡುತ್ತೇನೆ. ವರದಿ ವಿರೋಧ ಮಾಡುತ್ತಿರುವವರೂ ವರದಿ ನೋಡಿದ್ದರೆ ನಮಗೆ ತಿಳಿಸಲಿ. ನಿರ್ಮಲಾನಂದನಾಥ ಸ್ವಾಮೀಜಿ ಅವರಲ್ಲೂ ಮನವಿ ಮಾಡಿಕೊಳ್ಳುತ್ತೇನೆ ಎಂದರು.
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ವರದಿ ಸಿದ್ಧವಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ವರದಿ ಸ್ವೀಕಾರವಾಗಿಲ್ಲ. ಇದರಲ್ಲಿ ರಾಜಕೀಯ ಹಿತಾಸಕ್ತಿ ಅಡಗಿಲ್ಲ ಎಂದು ತಂಗಡಗಿ ಹೇಳಿದರು.




