ಬೆಂಗಳೂರು: ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಮುಸ್ಲಿಂ ಮಹಿಳೆಯೊಬ್ಬರನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಇವರನ್ನು ಪಶ್ಚಿಮ ಬಂಗಾಳ ಮೂಲದ ಸರ್ಬಾನು ಖಾತುನ್ (25) ಎಂದು ಗುರುತಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಪೊಲೀಸರ ಮಾಹಿತಿ ಪ್ರಕಾರ, ಸರ್ಬಾನು ಖಾತುನ್ ಹುಲಿಮಂಗಲದ ಪೋಡು ಪ್ರದೇಶದ ಬಳಿ ಇರುವ ಶೆಡ್‌ನಲ್ಲಿ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ಈ ಪ್ರದೇಶದಲ್ಲಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಬಾಂಗ್ಲಾದೇಶಿಯರು ಇದ್ದಾರೆ ಎಂದು ಹುಡುಕಾಟ ನಡೆಸಿದ್ದರು ಅಲ್ಲದೆ,ವಲಸಿಗರ ಶೆಡ್‌ಗಳ ಮೇಲೆ ದಾಳಿ ನಡೆಸಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಸಂದರ್ಭದಲ್ಲಿ, ಅಕ್ರಮವಾಗಿ ವಾಸವಾಗಿದ್ದರೆನ್ನಲಾದ ಜಹಿದುಲ್ ಇಸ್ಲಾಂ (35) ಮತ್ತು ಫಿರ್ದೋಸ್ (32) ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಈ ಶೆಡ್‌ಗಳ ಸಮೀಪದಲ್ಲೇ ವಾಸವಾಗಿದ್ದ ಸರ್ಬಾನು ಖಾತುನ್, ಶೆಡ್‌ಗಳನ್ನು ತೆರವುಗೊಳಿಸುವ ವೇಳೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದರು. ಆಗ ಅಲ್ಲಿದ್ದ ಹಿಂದೂ ಕಾರ್ಯಕರ್ತರು ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ ಉದ್ದಟತನದಿಂದ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾರೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅದರ ಆಧಾರದ ಮೇಲೆ ಹೆಬ್ಬಗೋಡಿ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆ ನಡೆಸಿದ ಬಳಿಕ, ದಾಖಲೆಗಳ ಪರಿಶೀಲನೆಗಾಗಿ ಮಹಿಳೆಯನ್ನು ಎಫ್‌ಆರ್‌ಆರ್‌ಒ (ಫಾರಿನರ್ಸ್ ರೀಜನಲ್ ರಿಜಿಸ್ಟ್ರೇಷನ್ ಆಫೀಸ್) ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದ್ದಾರೆ.




