ಬೆಳಗಾವಿ / ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ನಡೆಸಲು ಉದ್ದೇಶಿಸಿರುವ ಕರಾಳ ದಿನ ಆಚರಣೆಯ ಪ್ರತಿಭಟನೆಗೆ ಅವಕಾಶ ನೀಡದಂತೆ ಪ್ರತಿಬಂಧಿಸಲು ಆದೇಶಿಸಬೇಕು ಎಂದು ಕೋರಿ ರಾಜ್ಯ ಹೈಕೋರ್ಟ್ ಗೆ ರಿಟ್ ಸಲ್ಲಿಸಲಾಗಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಬೆಳಗಾವಿ ಜಿಲ್ಲೆ ಹುಕ್ಕೇರಿಯ ಎಂ.ವಡಗಾಂವ್ನ ಮಲ್ಲಪ್ಪ ಛಾಯಪ್ಪ ಅಕ್ಷರದ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಎಂಇಎಸ್ ಅಧ್ಯಕ್ಷ ಮನೋಹರ ಕಿಣೇಕರ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶ ನೀಡಿತು.
ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎನ್.ಪಿ.ಅಮೃತೇಶ್, ಕನ್ನಡ ರಾಜ್ಯೋತ್ಸವ ವಿರೋಧಿಸಿ ಎಂಇಎಸ್ 2019ರಿಂದಲೂ ಉಗ್ರ ರೀತಿಯ ಪ್ರತಿಭಟನೆ ನಡೆಸುತ್ತಲೇ ಬಂದಿದೆ. ಇದಕ್ಕೆ ಸರ್ಕಾರ ಅನುಮತಿ ನೀಡದೇ ಇದ್ದಾಗ್ಯೂ ಪ್ರತಿಭಟಿಸುವ ಮೂಲಕ ತನ್ನ ಉದ್ಧಟತನ ಮೆರೆಯುತ್ತಿದೆ. ಇವರ ವಿರುದ್ಧ ಪೊಲೀಸರು ಕ್ಷುಲ್ಲಕ ಪ್ರಕರಣಗಳನ್ನು ದಾಖಲಿಸಿ ಕೈ ತೊಳೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಇದಕ್ಕೆ ಸರ್ಕಾರದ ಪರ ವಕೀಲರು, ಕನ್ನಡ ರಾಜ್ಯೋತ್ಸವವನ್ನು ನಿರಾತಂಕವಾಗಿ ನಡೆಸಲು ಸರ್ಕಾರ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರ ವರ್ತನೆ ತೋರುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಈಗಾಗಲೇ ಆದೇಶಿಸಿದೆ. ಹಾಗಾಗಿ, ಈ ಆದೇಶಕ್ಕೆ ಅನುಗುಣವಾಗಿ ಮುಚ್ಚಳಿಕೆ ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಹಾಗೂ ಎಂಇಎಸ್ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ಪೀಠ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದೆ.




