ಬೆಳಗಾವಿ: ಈ ಬಾರಿ ರಾಷ್ಟ್ರೀಯ ಯುವಜನೋತ್ಸವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ ಎಂದರು.
ಕರ್ನಾಟಕ ರಾಜ್ಯಕ್ಕೆ ಈ ಅವಕಾಶ ದೊರೆತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು.
ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕ್ರೀಡಾ ಸಚಿವ ನಾರಾಯಣಗೌಡ, ಕಂದಾಯ ಸಚಿವ ಆರ್. ಅಶೋಕ್, ನಗರಾಭಿವೃದ್ಧಿ ಸಚಿವ ಬಸವರಾಜ ಬೈರತಿ, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖಾ ಕಾರ್ಯದರ್ಶಿಗಳೂ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.




