ಸ್ವಸ್ಥ ಸಮಾಜ ನಿರ್ಮಿಸಲು ಯುವಕರು ಮುಂದಾಗಲಿ

2 years ago

ಬಳ್ಳಾರಿ: ದೇಶದ ಯುವಕರು ಸಮಾಜದ ಸ್ವಾಸ್ಥ್ಯ ಕಾಪಾಡಲು ಸ್ವಯಂ ಪ್ರೇರಿತರಾಗಿ ಮುಂದಾಗಬೇಕು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ರುದ್ರೇಶ ಎಸ್.ಎನ್ ಕರೆ ನೀಡಿದರು.

ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಷ್ಟೀಯ ಸೇವಾ ಯೋಜನಾ ಕೋಶ ಇವರ ಸಂಯುಕ್ತಾಶ್ರಯದಲ್ಲಿ ನಗರದ ಹೊರವಲಯದಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ “ಹೆಚ್.ಐ.ವಿ/ಏಡ್ಸ್, ಟಿ.ಬಿ., ಆರ್‍ಆರ್‍ಸಿ ಗುರಿ ಉದ್ದೇಶ ಮತ್ತು ರಕ್ತದಾನ” ಕುರಿತಾದ ವಿಶ್ವವಿದ್ಯಾಲಯ ವ್ಯಾಪ್ತಿಗೊಳಪಡುವ ಎಲ್ಲಾ ಪದವಿ ಮಹಾವಿದ್ಯಾಲಯಗಳ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದ ಅವರು, ಸದೃಢ ಸಮಾಜ ನಿರ್ಮಿಸುವಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದೆ. ಯುವಕರು ದುಶ್ಚಟಗಳಿಗೆ ಒಳಗಾಗದೆ ದೇಹ ಮತ್ತು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು. ಪ್ರಾಧ್ಯಾಪಕರು ಕಾರ್ಯಾಗಾರದಲ್ಲಿ ಪಡೆದಂತಹ ಮಾಹಿತಿಯನ್ನು ಸಮಾಜದ ಒಳಿತಿಗಾಗಿ ಬಳಸಬೇಕು ಎಂದರು.

ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಡಾ.ಅನಂತ ಎಲ್.ಝಂಡೆಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಆರೋಗ್ಯ ಇಲಾಖೆಯು ಹೆಚ್‍ಐವಿ ಏಡ್ಸ್ ನಿಯಂತ್ರಣ ಜಾಗೃತಿ ಮೂಡಿಸಲು ಶ್ರಮಿಸುತ್ತಿದೆ. ಏಡ್ಸ್ ಕುರಿತಾಗಿ ಜನರಲ್ಲಿರುವ ತಪ್ಪು ಮಾಹಿತಿಯನ್ನು ಹೋಗಲಾಡಿಸಲು ವಿವಿಧ ಕಾರ್ಯಕ್ರಮಗಳ ಮೂಲಕ ಪ್ರಯತ್ನಿಸುತ್ತಿದ್ದು, ಇಂತಹ ಮಾರಕ ರೋಗಗಳ ಕುರಿತು ಅಧ್ಯಾಪಕರುಗಳು ಯುವಕರಿಗೆ ಮಾರ್ಗದರ್ಶನ ನೀಡಬೇಕು ಎಂದರು.

ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಗಿರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಮಾಜಿ ಪ್ರಭಾರ ಕುಲಪತಿ ಪ್ರೊ. ಸಾಹೇಬ್ ಅಲಿ ಹೆಚ್.ನಿರಗುಡಿ, ರಾಷ್ಟ್ರೀಯ ಸೇವಾಯೋಜನೆ ಸಂಯೋಜನಾಧಿಕಾರಿ ಡಾ.ಕುಮಾರ ಸೇರಿದಂತೆ ವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು ಹಾಗೂ ವಿಶ್ವವಿದ್ಯಾಲಯ ವ್ಯಾಪ್ತಿಗೊಳಪಡುವ  ಪದವಿ ಮಹಾವಿದ್ಯಾಲಯಗಳ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳು, ಮತ್ತಿತರರು ಹಾಜರಿದ್ದರು.

Leave a Reply